ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಪೋಕ್ಸೋ ಮತ್ತು ಬಾಲ್ಯವಿವಾಹದಂತಹ ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ದಾಖಲೆಗಳು ಮುಖ್ಯವಾಗುತ್ತವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಯಲ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಡಬ್ಲೂಡಿಒ ಮತ್ತು ಮಕ್ಕಳ ವಿಶೇಷ ಪೊಲೀಸ್ ಘಟಕದ ಮಕ್ಕಳ ಪೊಲೀಸ್ ಅಧಿಕಾರಿಗಳಿಗೆ ಪೋಕ್ಸೋ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಜರುಗಿದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಒಂದು ಪ್ರಕರಣ ದಾಖಲಾದಾಗ ಆ ಪ್ರಕರಣದ ಬಗ್ಗೆ ಸಾಕ್ಷಾಧಾರಗಳಲ್ಲಿ ಡಿಜಿಟಲ್ ಹಾಗೂ ಇತರೆ ದಾಖಲೆಗಳನ್ನು ಸಂಗ್ರಹಿಸಿಕೊಳ್ಳುವುದು ಮುಖ್ಯವಾಗಿದೆ. ಪೋಕ್ಸೋ, ಬಾಲ್ಯವಿವಾಹದಂತಹ ಪ್ರಕರಣಗಳಲ್ಲಿ ವಿದ್ಯಾರ್ಥಿಗಳ ಐಡಿ ಕಾರ್ಡ್ ಸಹ ದಾಖಲಾಗಿ ಪರಿಣಮಿಸುತ್ತವೆ. ಆದ್ದರಿಂದ ಕೆಳಹಂತದಲ್ಲಿರುವ ಅಧಿಕಾರಿಗಳು ಪ್ರಕರಣ ಬಗ್ಗೆ ಸೂಕ್ತ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿದಲ್ಲಿ ಪ್ರಕರಣ ಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ. ಪ್ರಕರಣದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಶಿಕ್ಷೆಯ ಪ್ರಮಾಣ ಹೆಚ್ಚಾದಲ್ಲಿ ಅವುಗಳ ಸಂಖ್ಯೆ ಸಹ ಮಾಡಲು ಸಾಧ್ಯವಾಗುತ್ತದೆ ಎಂದರು.ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಅನುಷ್ಠಾನ ಅಧಿಕಾರಿಗಳಿಗೆ ಪೋಕ್ಸೋ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕಾಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ಮಹತ್ವದ್ದಾಗಿದೆ. ಕಾಲಕಾಲಕ್ಕೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿರುವುದು ಉತ್ತಮ ಕಾರ್ಯವಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಪ್ರಕರಣ ವಿಚಾರಣೆಯಲ್ಲಿ ನಿರ್ಲಕ್ಷ್ಯ ಮಾಡಬಾರದು. ವಿಚಾರಣೆ ಗುಣಮಟ್ಟದಿಂದ ಕೂಡಿರಬೇಕಾಗುತ್ತದೆ. ಇದರಿಂದ ಪ್ರಕರಣಗಳ ಇತ್ಯರ್ಥಕ್ಕೆ ಅನುಕೂಲವಾಗಲಿದೆ. ಮುಖ್ಯವಾಗಿ ಇಂದಿನ ತಂತ್ರಜ್ಞಾನದ ಯುಗದಲ್ಲಿ ಸಾಕ್ಷಾದಾರಗಳಲ್ಲಿ ಡಿಜಿಟಲ್ ದಾಖಲೆಗಳನ್ನು ಮಹತ್ವ ಪಡೆದುಕೊಂಡಿದ್ದು, ವಿಚಾರಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಪೋಕ್ಸೋ ಮತ್ತು ಬಾಲ್ಯವಿವಾಹದಂತ ಪ್ರಕಣಗಳಲ್ಲಿ ಜಂಟಿಯಾಗಿ ಕೆಲಸ ಮಾಡುವುದು ಅಗತ್ಯವಾಗಿದೆ ಎಂದರು.ಕಾರ್ಯಾಗಾರದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಹನಮಂತಗೌಡ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿದ್ದಿ, ಡಿವಾಯ್ಎಸ್ಪಿ ಗಜಾನನ ಸುತಾರ, ತರಬೇತುದಾರರಾದ ರೋಹಿತ್ ಸಿ.ಜಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ವೀಣಾ ಎಂ ಸೇರಿದಂತೆ ಇತರರು ಉಪಸ್ಥಿತರಿದ್ದರು.