ಕೋವಿಡ್ ಭಯ ಬೇಡ ಮುನ್ನೆಚ್ಚರಿಕೆ ಇರಲಿ: ಸಚಿವ ಡಾ.ಎಂ.ಸಿ.ಸುಧಾಕರ್

KannadaprabhaNewsNetwork |  
Published : Dec 29, 2023, 01:32 AM IST
ಸಿಕೆಬಿ-11 ಸಚಿವ ಡಾ.ಎಂ.ಸಿ.ಸುಧಾಕರ್‌ ಮಾತನಾಡಿದರು | Kannada Prabha

ಸಾರಾಂಶ

ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಕಷ್ಟು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. 60 ವೆಂಟಿಲೇಟರ್ ಗಳು, 43 ಆಮ್ಲಜನಕ ಸಹಿತ ಹಾಸಿಗೆಗಳು ಲಭ್ಯವಿದೆ. ಆಮ್ಲಜನಕ ಉತ್ಪಾದನಾ ಘಟಕಗಳು ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸಾರ್ವಜನಿಕರು ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಸರ್ಕಾರದ ಮಾರ್ಗಸೂಚಿ ಪಾಲಿಸಿ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರಜಿಲ್ಲೆಯಲ್ಲಿ ಈವರೆಗೆ 1,060 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿ 13 ಜನರಿಗೆ ಕೋವಿಡ್ ದೃಢಪಟ್ಟಿದೆ. ಅವರೆಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ತಿಳಿಸಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿ, ಕೋವಿಡ್ ಎದುರಿಸಲು ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಕೋವಿಡ್‌ ಮಾರ್ಗಸೂಚಿ ಪಾಲಿಸಿ:

ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಕಷ್ಟು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. 60 ವೆಂಟಿಲೇಟರ್ ಗಳು, 43 ಆಮ್ಲಜನಕ ಸಹಿತ ಹಾಸಿಗೆಗಳು ಲಭ್ಯವಿದೆ. ಆಮ್ಲಜನಕ ಉತ್ಪಾದನಾ ಘಟಕಗಳು ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸಾರ್ವಜನಿಕರು ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಸರ್ಕಾರದ ಮಾರ್ಗ ಸೂಚಿ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.

ಕಿಸಾನ್ ಸಮ್ಮಾನ್ ಯೋಜನೆಯ ಪ್ರೋತ್ಸಾಹ ಧನ, ಬರ ಹಾಗೂ ಇತರ ಪರಿಹಾರ ಹಣವನ್ನು ರೈತರಿಗೆ ಸಂದಾಯ ಮಾಡಲು ಅನುಕೂಲವಾಗಲು ರೈತರ ಫ್ರೂಟ್ ಗುರುತಿನ ಚೀಟಿಯನ್ನು ಮಾಡುವ ಕಾರ್ಯವು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಈ ವರೆಗೆ ಶೇ 85ರಷ್ಟು ರೈತರ ಗುರುತಿನ ಚೀಟಿಯನ್ನು ನೋಂದಣಿ ಮಾಡಲಾಗಿದೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮ, ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಕರ ಬೋಧನಾ ಮಟ್ಟ ಮೌಲ್ಯಮಾಪನ:

ಗುಣಮಟ್ಟದ ಶಿಕ್ಷಣ ಹಲವು ಸಮಸ್ಯೆಗಳ ಪರಿಹಾರಕ್ಕೆ,ಉತ್ತಮ ಸಮಾಜದ ನಿರ್ಮಾಣಕ್ಕೆ ಕಾರಣವಾಗುತ್ತದೆ. ಆದ್ದರಿಂದ ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ವ್ಯವಸ್ಥೆಯನ್ನು ಬಲವರ್ಧನೆ ಮಾಡಬೇಕು. ಶಿಕ್ಷಕರ ಬೋಧನಾ ಗುಣಮಟ್ಟವನ್ನು ತಜ್ಙರಿಂದ ಮೌಲ್ಯಮಾಪನ ಮಾಡಿಸಿ ಪರಿಶೀಲಿಸಬೇಕು, ಅವರಿಗೆ ಒಂದು ತರಬೇತಿ ಕಾರ್ಯಗಾರವನ್ನು ಏರ್ಪಡಿಸಿ ಪರಿಣತರಿಂದ ಮಾರ್ಗದರ್ಶನ ನೀಡಬೇಕು, ಫ್ರೌಡ ಶಾಲಾ ಮಕ್ಕಳಿಗೆ ಡಿಜಿಟಲ್ ಶಿಕ್ಷಣ ನೀಡಲು 75 ಇಂಚಿನ ಸ್ಮಾರ್ಟ್ ಟಿ.ವಿಯನ್ನು ಜಿಲ್ಲೆಯ 19 ಶಾಲೆಗಳಿಗೆ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಅಗತ್ಯವಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಪ್ರಸ್ತಾವನೆ ತಯಾರಿಸಿ ಸಲ್ಲಿಸಲು ಹಾಗೂ ಯಾವ ಹೋಬಳಿಯಲ್ಲಿ ವಸತಿಶಾಲೆಗಳಲ್ಲವೋ ಅಂತಹ ಹೋಬಳಿಯಲ್ಲಿ ಸರ್ಕಾರಿ ವಸತಿಶಾಲೆಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಸ್ತುತ ಜಿಲ್ಲೆಯಲ್ಲಿನ ರಾಸುಗಳಿಗೆ 25ವಾರಗಳಿಗೆ ಆಗುವಷ್ಟು ಮೇವಿದೆ ಆದರೂ ಸಹ ಮುನ್ನೆಚ್ಚರಿಕೆ ಕ್ರಮವಾಗಿ ಮೇವು ಖರೀದಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್‌ ತಾಲ್ಲೂಕುವಾರು ಪಟ್ಟಿ:

ಚಿಕ್ಕಬಳ್ಳಾಪುರ- 4, ಚಿಂತಾಮಣಿ-3, ಶಿಡ್ಲಘಟ್ಟ-3, ಬಾಗೇಪಲ್ಲಿ-1, ಗೌರಿಬಿದನೂರು-2, ಗುಡಿಬಂಡೆ-0, ಒಟ್ಟು-13. ಇದ್ದು ಇವರಲ್ಲಿ ಒಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆಂದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ, ಪ್ರದೀಪ್ ಈಶ್ವರ್, ಕೆ.ಹೆಚ್.ಪುಟ್ಟಸ್ವಾಮಿ ಗೌಡ, ಬಿ. ಎನ್.ರವಿಕುಮಾರ್, ವಿಧಾನ ಪರಿಷತ್‌ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ತಹಶೀಲ್ದಾರ್ ಅನಿಲ್,ಗೌರಿಬಿದನೂರು ತಹಸಿಲ್ದಾರ್‌ ಮಹೇಶ್.ಎಸ್.ಪತ್ರಿ, ಮುಖ್ಯ ಯೋಜನಾಧಿಕಾರಿ ಧನುರೇಣುಕ ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ