ವಿಜಯಪುರ : ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯಡಿ 40,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಬಾರದೆಂದು ಆಗ್ರಹಿಸಿ ನಗರದ ರಾಣಿ ಚನ್ನಮ್ಮ ವೃತ್ತದ ಬಳಿ ವಿವಿಧ ಹಳ್ಳಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಆಗ್ರಹಿಸಿ ಪ್ರತಿಭಟಿಸಿದರು. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಮ್ಯಾಗ್ನೆಟ್ ಯೋಜನೆಯ ಮೂಲಕ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಮತ್ತು ವಿಲೀನಗೊಳಿಸುವ ರಾಜ್ಯ ಸರ್ಕಾರದ ನಡೆಯನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್‌ನ ಕರ್ನಾಟಕ ರಾಜ್ಯ ಸಮಿತಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ.
ರಾಜ್ಯದ ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಕೆಪಿಎಸ್ ಶಾಲೆಯಡಿ 6 ಕಿಮೀ ವ್ಯಾಪ್ತಿಯೊಳಗಿನ 77, 82, 31, 100, 20 ಮತ್ತು 80 ವಿದ್ಯಾರ್ಥಿಗಳಿರುವ 6 ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸಲು ಈಗಾಗಲೇ ಆದೇಶ ನೀಡಲಾಗಿದೆ. ಇದು ಶಾಲೆಗಳನ್ನು ಮುಚ್ಚುವ ಸ್ಪಷ್ಟ ನಿದರ್ಶನವಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2025 ಅಕ್ಟೋಬರ್ 15 ರಂದು ಹೊರಡಿಸಿದ ಸುತ್ತೋಲೆಯಲ್ಲಿ ಕೆಪಿಎಸ್-ಮ್ಯಾಗ್ನೆಟ್ ಶಾಲೆಗಳೊಂದಿಗೆ 1ರಿಂದ 5 ಕಿಮೀ ವ್ಯಾಪ್ತಿಯ ಒಳಗಿನ ಚಿಕ್ಕ ಸರ್ಕಾರಿ ಶಾಲೆಗಳನ್ನು ಈ ಪ್ರಸ್ತಾಪಿತ ಕರ್ನಾಟಕ ಪಬ್ಲಿಕ್ ಶಾಲೆಗಳೊಂದಿಗೆ ಸುಲಲಿತವಾಗಿ ಸಮ್ಮಿಳಿತಗೊಳಿಸುವುದು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಸರ್ಕಾರದ ಈ ಎಲ್ಲಾ ನಿರ್ದೇಶನಗಳು ಜಾರಿಯಾದಲ್ಲಿ ಕರ್ನಾಟಕದ ಸಾವಿರಾರು ಶಾಲೆಗಳು ಮುಚ್ಚಲಿವೆ ಎಂಬ ಆತಂಕ ಕರ್ನಾಟಕದ ಜನತೆಯನ್ನು ಕಾಡುತ್ತಿವೆ. ಸಚಿವರು ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಸಂಘ ಸಂಸ್ಥೆಗಳ ಇತರ ಕೆಲಸಗಳಿಗೆ ವಿನಿಯೋಗಿಸಲು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿದ್ದಾರೆ. ಸರ್ಕಾರದ ನಡೆ ಸಂಪೂರ್ಣ ಖಾಸಗೀಕರಣಕ್ಕೆ ನಾಂದಿ ಹಾಡಲಿದೆ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭಟನಾ ಸ್ಥಳಕ್ಕೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ ಕಾಮತ, ಉಪಾಧ್ಯಕ್ಷೆ ಅಭಯಾ ದಿವಾಕರ, ರಾಜ್ಯ ಖಜಾಂಚಿ ಸುಭಾಷ ಬೆಟ್ಟದಕೊಪ್ಪ, ಕಚೇರಿ ಕಾರ್ಯದರ್ಶಿ ಮಹಾಂತೇಶ, ರಾಮು, ತಾರಾ ಕುಲಕರ್ಣಿ, ಸತೀಶ ಶಾಪುರ್ಕರ ಸೇರಿದಂತೆ ವಿವಿಧ ಗ್ರಾಮಗಳಿಂದ ತಾಯಂದಿರು, ಪಾಲಕರು ಹಾಗೂ ಊರಿನ ಹಿರಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.