ಚಿತ್ರದುರ್ಗ: ವಿಕಲಚೇತನರಿಗೆ ಅನುಕಂಪ ತೋರಿಸುವುದಕ್ಕಿಂತ ಮುಖ್ಯವಾಗಿ ಅವಕಾಶ ಕಲ್ಪಿಸಿಕೊಡಬೇಕು. ಆಗ ಅವರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಹಾಗೂ ವಿವಿದೋದ್ದೇಶ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಾವುದೇ ಕಾರಣಕ್ಕೂ ವಿಕಲಚೇತನರು ಎದೆಗುಂದಬಾರದು. ಉತ್ಸಾಹ, ಛಲ, ಧೈರ್ಯ, ಕಠಿಣ ಪರಿಶ್ರಮವಿದ್ದರೆ ಸಾಧನೆ ಮಾಡುವುದು ಕಷ್ಟವೇನಲ್ಲ. ಪ್ಯಾರಾಲಂಪಿಕ್ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರು ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಸಾಧನೆ ಮಾಡಿರುವ ಉದಾಹಣೆಗಳಿವೆ ಎಂದರು. ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಉದ್ಯೋಗದಲ್ಲಿಯೂ ಮೀಸಲಾತಿ ಮತ್ತು ಅವಕಾಶಗಳನ್ನು ಕಲ್ಪಿಸಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ವಿಕಲಚೇತನರು ತಮ್ಮ ದೈಹಿಕ ನ್ಯೂನತೆಗಳ ಬಗ್ಗೆ ಕೀಳರಿಮೆಯನ್ನು ಮನಸ್ಸಿನಿಂದ ತೊರೆದು, ನಾವು ಯಾರಿಗೂ ಕಮ್ಮಿ ಇಲ್ಲ ಎಂಬ ಭಾವನೆ ಹೊಂದಬೇಕು. ವಿಕಲಚೇತನರಲ್ಲಿ ವಿಶೇಷ ಗುಣಗಳಿದ್ದು, ಕೌಶಲ್ಯಗಳಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು. ನಗರಸಭೆ ಅಧ್ಯಕ್ಷೆ ಸುಮಿತಾ.ಬಿ.ಎನ್ ರಾಘವೇಂದ್ರ ಮಾತನಾಡಿ, ವಿಕಲಚೇತನರು ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳುವ ಮೂಲಕ ಉನ್ನತ ಗುರಿ ಇರಿಸಿಕೊಂಡು ಅದರ ಸಾಕಾರಕ್ಕೆ ಯತ್ನಿಸಬೇಕು. ಅಂಗವಿಕಲರು ಪ್ರತಿಭಾವಂತರಾಗಿದ್ದು, ಮಾನಸಿಕವಾಗಿ ಸಬಲರಾಗುವ ಮೂಲಕ ದೈಹಿಕ ನ್ಯೂನತೆಗಳನ್ನು ಮೆಟ್ಟಿನಿಂತು ಸಾಧನೆ ಮಾಡಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ.ಆರ್ ಬಣಕಾರ್ ಮಾತನಾಡಿ, ಅಂಗವಿಕಲರು ಕ್ರೀಡಾ ಮತ್ತು ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ವಿಶೇಷವಾದ ಸಾಧನೆ ತೋರಿದ್ದಾರೆ. ವಿಶೇಷ ಚೇತನರಿಗೆ ಅನುಕಂಪ, ತಾತ್ಸಾರಕ್ಕಿಂತ ಅವಕಾಶ ಕಲ್ಪಿಸಬೇಕು. ಸಾಮಾನ್ಯ ಮನುಷ್ಯರಿಗಿಂತ ಅಂಗವಿಕಲರಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಎಂದು ತಿಳಿಸಿದರು.ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, 2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 35,971 ಜನ ವಿಕಲಚೇತನರು ಇದ್ದಾರೆ. ವಿಕಲಚೇತನರು ಸಮಾಜದಲ್ಲಿ ಸಾಮಾನ್ಯರಂತೆ ಜೀವಿಸಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಅಡೆತಡೆರಹಿತ ಸೌಲಭ್ಯ ಮತ್ತು ನೆರವು ನೀಡುವುದು ಸರ್ಕಾರ ಹಾಗೂ ಸಮುದಾಯದ ಜವಾಬ್ದಾರಿಯಾಗಿದೆ ಎಂದರು. ಇದೇ ವೇಳೆ 2023-24ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿಕಲಚೇತನ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ವಿಕಲಚೇತನ ವಿದ್ಯಾರ್ಥಿ ಈ ಶ್ರೀಹರಿ ಅವರನ್ನು ಗೌರವಿಸಲಾಯಿತು. ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದಲ್ಲಿ ವಿಕಲಚೇತನರಿಗೆ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ವಿತರಿಸಲಾಯಿತು.ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್, ವಿಕಲಚೇತನರ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪವಿತ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಇದ್ದರು.