- ಮತದಾನ ಜಾಗೃತಿಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಕಾರ್ಯಕ್ರಮ
- ಕೊಪ್ಪಳದಲ್ಲಿ ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆಕನ್ನಡಪ್ರಭ ವಾರ್ತೆ ಕೊಪ್ಪಳಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞೆಯ ಹಕ್ಕು ಮತ್ತು ಕರ್ತವ್ಯವಾಗಿದ್ದು, ಅರ್ಹ ಮತದಾರರು ಮತದಾನ ಮಾಡಲು ನಿಷ್ಕಾಳಜಿ ತೋರದಿರಿ, ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯಿಂದ ಕೊಪ್ಪಳ ನಗರದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಸುಮಾರು 18 ಲಕ್ಷ ಮತದಾರರಿದ್ದಾರೆ. ಕಳೆದ ಬಾರಿ ಸುಮಾರು ಶೇ.70 ರಷ್ಟು ಮತದಾನವಾಗಿತ್ತು. ಈ ಬಾರಿಯ ಮತದಾನ ಪ್ರಮಾಣ ಹೆಚ್ಚು ಆಗಬೇಕೆಂಬ ಗುರಿ ಇಟ್ಟುಕೊಂಡು ಜಿಲ್ಲಾ ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ನಮ್ಮ ಮತ ನಮ್ಮ ಹಕ್ಕು ಆಗಿದ್ದು ಅದನ್ನು ಕಡ್ಡಾಯವಾಗಿ ಚಲಾಯಿಸಬೇಕು. ಮತದಾನ ಪ್ರಕ್ರಿಯೆಯಿಂದ ಯಾರೂ ಸಹ ದೂರ ಉಳಿಯಬಾರದು. ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲರೂ ಶ್ರಮಿಸಬೇಕು ಎಂದರು.
ಪ್ರತಿಜ್ಞಾ ವಿಧಿ ಸ್ವೀಕಾರ:ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆಯ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆ:
ಕೊಪ್ಪಳ ನಗರದ ಗಂಜ್ ವೃತ್ತದಿಂದ ಅಶೋಕ ವೃತ್ತದವರೆಗೆ ಹಾಗೂ ಗಡಿಯಾರ ಕಂಬ ವೃತ್ತದಿಂದ ಅಶೋಕ ವೃತ್ತದವರೆಗೆ ಸೇರಿ ಎರಡು ತಂಡಗಳಿಂದ ಹಮ್ಮಿಕೊಳ್ಳಲಾಗಿದ್ದ ಕ್ಯಾಂಡಲ್ ಲೈಟ್ ಮೆರವಣಿಗೆಯು ಸಾರ್ವಜನಿಕರ ಗಮನ ಸೆಳೆಯಿತು. ಈ ಜಾಥಾದಲ್ಲಿ ಅಧಿಕಾರಿಗಳು, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನ ಜಾಗೃತಿಗೆ ಕೈಜೋಡಿಸಿದರು.ಮತದಾನ ಜಾಗೃತಿಗೆ ಜಿಲ್ಲಾ ಸ್ವೀಪ್ ಸಮಿತಿಯ ಈ ವಿಶೇಷ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ, ಜಿಪಂ ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಕೊಪ್ಪಳ ತಹಸೀಲ್ದಾರ್ ವಿಠ್ಠಲ ಚೌಗಲಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ಸ್ವೀಪ್ ಐಕಾನ್ಸ್ ಡಾ. ಶಿವಕುಮಾರ್ ಮಾಲಿಪಾಟೀಲ್, ಪೂರ್ಣಿಮಾ, ರಮ್ಯಾ ಹಾಗೂ ಮೆಹಬೂಬ್ ಕಿಲ್ಲೆದಾರ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಶಿಕ್ಷಕರರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.