ಕಡಿಮೆ ಅಂಕಗಳು ಬಂದಾಗ ಕುಗ್ಗಬಾರದು: ಮೋಹನರಾಜ್

KannadaprabhaNewsNetwork |  
Published : Jul 15, 2024, 01:58 AM IST
ಫೋಟೊ14ಕೆಪಿಎಲ್1: ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನ್ ರಾಜ್ ಅವರು ಕೊಪ್ಪಳ ಜಿಲ್ಲೆ ಕುಕನೂರಿನ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ವೇಳೆ ಆಹಾರ ಸೇವಿಸಿ ಗುಣಮಟ್ಟ ಪರಿಶೀಲಿಸಿದರು | Kannada Prabha

ಸಾರಾಂಶ

ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕುಕನೂರ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿವಿಧ ವಸತಿ ನಿಲಯಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕುಕನೂರ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಕನೂರಿನ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿದರು.

ವಸತಿ ನಿಲಯದಲ್ಲಿನ ಗಣಯಂತ್ರ ಕೊಠಡಿ, ವಸತಿ ಗೃಹಗಳು, ಗ್ರಂಥಾಲಯಗಳ ವೀಕ್ಷಣೆ ಮಾಡಿದರು. ಅಲ್ಲಿನ ಸೌಕರ್ಯಗಳ ಸ್ಥಿತಿಗತಿಯ ಬಗ್ಗೆ ಪರಿಶೀಲಿಸಿದರು.

ವಸತಿ ನಿಲಯದಲ್ಲಿನ ಅಡುಗೆ ತಯಾರಕರೊಂದಿಗೆ ಮಾತನಾಡಿ, ಆಹಾರವನ್ನು ಶುಚಿಯಾಗಿ ಮತ್ತು ಗುಣಮಟ್ಟದ ರೀತಿಯಲ್ಲಿ ಸಿದ್ಧಪಡಿಸಲು ಸಲಹೆ ನೀಡಿದರು. ಅಡುಗೆದಾರರು ತಯಾರಿಸಿದ್ದ ಉಪಾಹಾರವನ್ನು ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿದರು.

ಇದೇ ವೇಳೆ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ವಿದ್ಯಾಭ್ಯಾಸದ ಬಗ್ಗೆ ಚರ್ಚಿಸಿದರು. ಸರ್ಕಾರವು ಬಡ ಮಕ್ಕಳ ಓದಿಗಾಗಿ ಸಾಕಷ್ಟು ಅನುದಾನ ಖರ್ಚು ಮಾಡುತ್ತಿದ್ದು, ವಿದ್ಯಾರ್ಥಿಗಳು ಇದನ್ನರಿತು ಅಧ್ಯಯನ ಮಾಡಬೇಕು. ವಿದ್ಯಾರ್ಥಿಗಳು ಸತತ ಅಧ್ಯಯನ ಮಾಡಬೇಕು. ಕಡಿಮೆ ಅಂಕಗಳು ಬಂದಾಗ ಕುಗ್ಗಬಾರದು. ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿಸಿಕೊಳ್ಳಬೇಕು. ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸಬೇಕು. ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಮೋಹನರಾಜ್ ಸಲಹೆ ನೀಡಿದರು.ಕುಕನೂರಿನ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಅವಶ್ಯಕತೆಗೆ ತಕ್ಕಂತೆ ವಸತಿ ಗೃಹಗಳ, ಶೌಚಾಲಯ ಹಾಗೂ ಸ್ನಾನದ ಕೊಠಡಿಗಳ ಅವಶ್ಯಕತೆ ಇದೆ ಎಂದು ಅಧಿಕಾರಿಗಳು ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ವರದಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ