ಕೋವಿಡ್ ಭಯ ಬೇಡ, ಜಾಗ್ರತೆ ಇರಲಿ- ಸಚಿವ ಎಚ್‌.ಕೆ. ಪಾಟೀಲ

KannadaprabhaNewsNetwork |  
Published : May 28, 2025, 12:09 AM IST
ಸಭೆಯನ್ನು ಉದ್ದೇಶಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿದರು.  | Kannada Prabha

ಸಾರಾಂಶ

ಗದಗ ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗ್ರತೆ ವಹಿಸಬೇಕು. ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ, ಆದರೆ ಜಾಗ್ರತೆ ಇರಲಿ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.

ಗದಗ: ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗ್ರತೆ ವಹಿಸಬೇಕು. ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ, ಆದರೆ ಜಾಗ್ರತೆ ಇರಲಿ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.

ಅವರು ಮಂಗಳವಾರ ಗದಗ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜರುಗಿದ ಕೋವಿಡ್ ಮುಂಜಾಗ್ರತಾ ಸಭೆಯ ಅಧ್ಯಕ್ಷತೆ‌ ವಹಿಸಿ‌‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

ಪ್ರತಿ ವಾರಕ್ಕೊಮ್ಮೆ ಕೋವಿಡ್ ಹರಡುವಿಕೆ ಪರಿಸ್ಥಿತಿಯ ಪರಿಶೀಲನೆಯನ್ನು ಜಿಲ್ಲಾಡಳಿತ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪಾಲಕರು ಗಮನಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ರೋಗ ಲಕ್ಷಣ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕೆಂದರು.

ಕೋವಿಡ್ ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಿ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪರಿಸ್ಥಿತಿ ಎದುರಿಸಿ, ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ನೋಡಿಕೊಳ್ಳಿ, ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜಿಲ್ಲಾ ಆಸ್ಪತ್ರೆಗಳೂ ಸೇರಿದಂತೆ ಎಲ್ಲ ಆಸ್ಪತ್ರೆ ಗಳು ಕೋವಿಡ್ ಸೋಂಕಿತರ ಆರೈಕೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ ಪಾಲನೆ ಕಡ್ಡಾಯ. ಸದ್ಯಕ್ಕೆ ರಾಜ್ಯ ಜಿಲ್ಲೆಯಲ್ಲಿ ಅಂತಹ ತುರ್ತು ಇಲ್ಲದಿದ್ದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಎಲ್ಲವನ್ನೂ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಡ್ಡಾಯವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು. ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಮಾತನಾಡಿ, ಸಾರ್ವಜನಿಕರಲ್ಲಿ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸಲಹೆ ಮಾಡಿದರು.

ಜಿ‌‌ಪಂ ಸಿಇಓ ಭರತ್ ಎಸ್ ಮಾತನಾಡಿ, ತಾಲೂಕು ಹಂತದಲ್ಲಿ ಸಭೆ‌ ಜರುಗಿಸಿ ಕೋವಿಡ್ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಿ, ಕೋವಿಡ್ ಮಾರ್ಗಸೂಚಿ ಪಾಲನೆ ಎಲ್ಲರ ಹೊಣೆಯಾಗಿದೆ ಎಂದರು. ಸಭೆಯಲ್ಲಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಿಎಚ್ಒ ಡಾ. ಎಸ್ ಎಸ್. ನೀಲಗುಂದ ಸಭೆಗೆ ಕೋವಿಡ್ ನಿಯಂತ್ರಣಕ್ಕಾಗಿ ಮಾಡಲಾದ ಸಿದ್ಧತೆ, ಅನುಸರಿಸುವ ಕ್ರಮಗಳ ಮಾಹಿತಿ ನೀಡಿದರು.

ಸಭೆಯಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ ಸಾಬ್ ಬಬರ್ಜಿ, ಎಡಿಸಿ ಅನ್ನಪೂರ್ಣ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಆರೋಗ್ಯ ಇಲಾಖೆ ಕಾರ್ಯಕ್ರಮ ಅಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.

ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ಗದಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ವರದಿಯಾಗದಿದ್ದರೂ ಸಹ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ