ಹಕ್ಕಿಜ್ವರದ ಬಗ್ಗೆ ಆತಂಕ ಬೇಡ, ಎಚ್ಚರವಿರಲಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : Mar 11, 2025, 12:49 AM IST
ಹಕ್ಕಿ ಜ್ವರ ನಿಯಂತ್ರಣ ಕುರಿತ ಸಭೆ ನಡೆಯಿತು. | Kannada Prabha

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಸಾರ್ವಜನಿಕರು ಈ ರೋಗದ ಬಗ್ಗೆ ಹೆಚ್ಚಿನ ಆತಂಕಕ್ಕೆ ಒಳಗಾಗದೇ ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವ ಮೂಲಕ ಎಚ್ಚರಿಕೆ ವಹಿಸಬೇಕು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಕ್ಕಿಜ್ವರದ ಕುರಿತಂತೆ ಜಿಲ್ಲೆಯಲ್ಲಿರುವ 160 ಕೋಳಿ ಫಾರಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವುಗಳ ಮಾಲೀಕರಿಗೆ ಹಕ್ಕಿಜ್ವರದ ಲಕ್ಷಣಗಳು ಮತ್ತು ಇದರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸಬೇಕು. ಸಾಮೂಹಿಕವಾಗಿ 50ಕ್ಕೂ ಅಧಿಕ ಕೋಳಿಗಳು ಮತ್ತು ವಿದ್ಯುತ್ ಅವಘಡಗಳನ್ನು ಹೊರತುಪಡಿಸಿ ಇತರೆ ಕಾರಣಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಿಗಳು ಮೃತಪಟ್ಟಿದ್ದು ಕಂಡು ಬಂದಲ್ಲಿ ಕೂಡಲೇ ಮರಣದ ಕಾರಣದ ಬಗ್ಗೆ ಪರಿಶೀಲಿಸಿ, ಮಾಹಿತಿ ನೀಡುವಂತೆ ತಿಳಿಸಿದರು.

ಹಕ್ಕಿಜ್ವರ ಕುರಿತಂತೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಈ ರೋಗದ ಬಗ್ಗೆ ನಿಗಾ ಇಡಲಾಗಿದೆ. ಸಾರ್ವಜನಿಕರು ಶುಚಿತ್ವ ಗಮನದಲ್ಲಿಟ್ಟುಕೊಂಡು ಆರೋಗ್ಯವಾಗಿರುವ ಕೋಳಿ ಮಾಂಸ, ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಎಂದಿನಂತೆ ಬಳಸಬಹುದು. ಯಾವುದೇ ರೀತಿಯ ಗೊಂದಲ, ಆತಂಕ ಬೇಡ ಎಂದರು.

ಹಕ್ಕಿಜ್ವರವು ವೈರಸ್‌ನಿಂದ ಹರಡುವ ರೋಗವಾಗಿದೆ. ಇದು ಟರ್ಕಿ ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಯ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಹಾಗೂ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ, ಕೋಳಿ ಹಿಕ್ಕೆ, ತ್ಯಾಜ್ಯ ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಕಾಯಿಲೆ ಹರಡುತ್ತದೆ ಎಂದರು.

ಈ ರೋಗ ಪೀಡಿತರಲ್ಲಿ ಜ್ವರ, ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು ಉಸಿರಾಟದಲ್ಲಿ ತೊಂದರೆ ಈ ಲಕ್ಷಣಗಳು ಕಾಣಿಸಿದ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಬೇಕು ಹಕ್ಕಿಜ್ವರವು ಮುನ್ನೆಚರಿಕೆಯಿಂದ ತಡೆಯಬಲ್ಲ ಕಾಯಿಲೆಯಾಗಿದೆ. ಖಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಬಿ.ವಿ., ಪಶುಪಾಲನಾ ಇಲಾಖೆ ಉಪನಿರ್ದೇಶಕ

ಡಾ. ಮೋಹನಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಡಾ. ಕ್ಯಾ.ರಮೇಶ್ ರಾವ್, ಜಿಲ್ಲಾ ಆರ್‌ಸಿಎಚ್‌ಎ ಡಾ.ನಟರಾಜ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ