ಕನ್ನಡಪ್ರಭ ವಾರ್ತೆ ಮಂಡ್ಯ
ಗುರುವಾರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜೆಡಿಎಸ್-ಬಿಜೆಪಿ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡಿ, ಗೋವಾದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ. ಚುನಾವಣೆಯ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉರುಳಲಿದ್ದು, ಮತ್ತೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ರಚನೆಯಾಗಲಿದೆ ಎಂದು ವಿಶ್ವಾಸದಿಂದ ನುಡಿದರು.
ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ. ಕಾಂಗ್ರೆಸ್‌ನಿಂದ ದೇಶ ಪ್ರಗತಿಯತ್ತ ಸಾಗಲು ಎಂದಿಗೂ ಸಾಧ್ಯವಿಲ್ಲ. ಕರ್ನಾಟಕದ ೨೮ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ದೇಶಾದ್ಯಂತ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ ಜಯಗಳಿಸಲಿದೆ. ಕುಮಾರಸ್ವಾಮಿ ಅವರನ್ನು ಲೋಕಸಭೆಗೆ ಕಳುಹಿಸುವ ಮೂಲಕ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬಂತೆ ಮತ್ತೆ ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರಬೇಕು. ನಾರಿ ಶಕ್ತಿ, ಯುವ ಶಕ್ತಿ, ಕಿಸಾನ್ ಶಕ್ತಿ ಮತ್ತು ಗರೀಬ್ ಕಲ್ಯಾಣ್ ಎಂಬ ನಾಲ್ಕು ಸ್ಥಂಭಗಳ ಸರ್ಕಾರ ಮುನ್ನಡೆಯಲು ಜನರು ಬೆಂಬಲ ನೀಡಬೇಕು ಎಂದರು.ಕಾಂಗ್ರೆಸ್ ಸರ್ಕಾರ ಐವತ್ತು ವರ್ಷ ಮಾಡದೇ ಇರುವ ಕೆಲಸವನ್ನು ಮೋದಿ ಸರ್ಕಾರ ಹತ್ತು ವರ್ಷಗಳಲ್ಲಿ ಮಾಡಿದೆ. ಈ ವಿಷಯವಾಗಿ ರಾಹುಲ್ ಗಾಂಧಿ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ. ದೇಶದಲ್ಲಿ ಕಾಂಗ್ರೆಸ್ ಇದ್ದ ಸಮಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳಾಗಿವೆ ಹೇಳಲಿ ಎಂದು ಸವಾಲು ಹಾಕಿದರಲ್ಲದೆ, ಕ್ಲೀನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಸೇರಿದಂತೆ ಬಹಳಷ್ಟು ಕಾರ್ಯಕ್ರಮಗಳನ್ನು ಮೋದಿ ಜಾರಿಗೆ ತಂದಿದ್ದಾರೆ. ಹತ್ತು ವರ್ಷಗಳ ಹಿಂದೆ ೩೫೦ ಮೆಡಿಕಲ್ ಕಾಲೇಜು ಇದ್ದವು. ಈಗ ೭೫೦ ಕ್ಕೂ ಹೆಚ್ಚು ಕಾಲೇಜುಗಳನ್ನು ತೆರೆಯಲಾಗಿದೆ ಎಂದು ಹೇಳಿದರು.