ಹದಿನಾರನೇ ಬಜೆಟ್‌ನಲ್ಲಿ ಹತ್ತಾರು ಕೊಡುಗೆ

KannadaprabhaNewsNetwork |  
Published : Mar 07, 2025, 11:46 PM IST
ಫೋಟೋ | Kannada Prabha

ಸಾರಾಂಶ

ದಾಖಲೆಯ 16ನೇ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಮೈಸೂರು ಜಿಲ್ಲೆಗೆ ಬಂಪರ್‌ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಮೂಲಸೌಕರ್ಯ, ಪ್ರವಾಸೋದ್ಯಮ, ಆರೋಗ್ಯ ಶಿಕ್ಷಣ, ಕ್ರೀಡೆ, ಮಾಹಿತಿ ತಂತ್ರಜ್ಞಾನ- ಹೀಗೆ ಹಲವಾರು ಕ್ಷೇತ್ರಗಳಿಗೆ ಆದ್ಯತೆ ನೀಡಿದ್ದಾರೆ.

ಅಂಶಿ ಪ್ರಸನ್ನಕುಮಾರ್‌

ಕನ್ನಡಪ್ರಭ ವಾರ್ತೆ ಮೈಸೂರು

ದಾಖಲೆಯ 16ನೇ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಮೈಸೂರು ಜಿಲ್ಲೆಗೆ ಬಂಪರ್‌ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಮೂಲಸೌಕರ್ಯ, ಪ್ರವಾಸೋದ್ಯಮ, ಆರೋಗ್ಯ ಶಿಕ್ಷಣ, ಕ್ರೀಡೆ, ಮಾಹಿತಿ ತಂತ್ರಜ್ಞಾನ- ಹೀಗೆ ಹಲವಾರು ಕ್ಷೇತ್ರಗಳಿಗೆ ಆದ್ಯತೆ ನೀಡಿದ್ದಾರೆ.

ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ನಿಮ್ಹಾನ್ಸ್ ಮಾದರಿಯ ಎಂಡೋಕ್ರೈನಾಲಜಿ ಪ್ರಾದೇಶಿಕ ಕೇಂದ್ರವನ್ನು ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಮೈಸೂರು ಹಾಗೂ ಕಲಬುರಗಿ ಸೇರಿ 100 ಕೋಟಿ ರು. ಒದಗಿಸಲಾಗುತ್ತದೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಸಂಶೋಧನಾ ಪೀಠ ಆರಂಭಿಸಲಾಗುವುದು. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಾದ ಪ್ರೊ.ಎಂಡಿಎನ್‌ ಅವರ ಮೂಲಕ ಸಿದ್ದರಾಮಯ್ಯ ಅವರು ಸಾರ್ವಜನಿಕ ಜೀವನಕ್ಕೆ ಬಂದವರು. ಆರಂಭದ ಹಂತದಲ್ಲಿ ಸಿದ್ದರಾಮಯ್ಯ ಸಮಾಜವಾದಿ ಚಳವಳಿ ಹಾಗೂ ರೈತ ಸಂಘದಲ್ಲಿ ಗುರುತಿಸಿಕೊಂಡಿದ್ದರು.

ಮಾನಸ ಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ 2,500 ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳ ಡಿಜಿಟಲೀಕರಣ ಯೋಜನೆಯನ್ನು ಒಂದು ಕೋಟಿ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಸಂಸ್ಕೃತ ವಿಷಯದ ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳಿದ್ದರೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡದ ಪ್ರಾಚೀನ ತಾಳೆಗರಿಯ ಹಸ್ತಪ್ರತಿಗಳಿವೆ.

ಇಡೀ ದಕ್ಷಿಣ ಭಾರತದಲ್ಲಿಯೇ ಮೊದಲ ರೆಪರ್ಟರಿಯಾಗಿ ಆರಂಭವಾದ ಮೈಸೂರಿನ ರಂಗಾಯಣದ ಕಾರ್ಯಚಟುವಟಿಕೆಗಳಿಗೆ ಎರಡು ಕೋಟಿ ರು. ಅನುದಾನ ಒದಗಿಸಲಾಗುವುದು. ರಾಜ್ಯದ ಸಂಸ್ಕೃತಿ, ನಾಗರಿಕತೆಯ ಉಗಮ, ವಿಕಾಸಗಳೂ ಸೇರಿದಂತೆ ಐತಿಹಾಸಿಕ, ಸಾಮಾಜಿಕ ಸಂಗತಿಗಳನ್ನು ಬಿಂಬಿಸುವ ರಾಜ್ಯಮಟ್ಟದ ವಸ್ತು ಸಂಗ್ರಹಾಲಯವನ್ನು ಹಳೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗುವುದು. ಸಿದ್ದಾರ್ಥನಗರದಲ್ಲಿ ಹೊಸ ಜಿಲ್ಲಾಧಿಕಾರಿ ಕಚೇರಿ ಆರಂಭವಾಗಿರುವುದರಿಂದ ಈ ಪಾರಂಪರಿಕ ಕಟ್ಡಡವನ್ನು ಮ್ಯೂಸಿಯಂ ಮಾಡಲಾಗುತ್ತಿದೆ.

ಟಿ. ನರಸೀಪುರ ತಾಲೂಕು ಕುರುಬೂರಿನ ಬಿ. ಚೈತ್ರಾ ಮಹಿಳೆಯರ ವಿಶ್ವಕಪ್‌ ಖೋಖೋ ಪ್ರಶಸ್ತಿ ವಿಜೇತ ತಂಡದಲ್ಲಿ ಆಟವಾಡಿದ್ದರು. ಈ ಮೂಲಕ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಕುಸ್ತಿ, ವಾಲಿಬಾಲ್‌, ಖೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರು. ಒದಗಿಸಲಾಗುತ್ತಿದೆ.

ಈಗಾಗಲೇ ಕರ್ನಾಟಕ ಮೀನುಗಾರಿಕೆ ಮಹಾಮಂಡಳದ ಮೂಲಕ ಕುಕ್ಕರಹಳ್ಳಿ ಕೆರೆ ಸೇರಿದಂತೆ ಕೆಲವೆಡೆ ಮತ್ಸ್ಯದರ್ಶಿನಿಗಳಿವೆ. ಇದೀಗ

ಪ್ರವಾಸಿಗರಿಗೆ ಶುಚಿ- ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಹೈಟೆಕ್ ಮತ್ಸ್ಯದರ್ಶಿನಿ ಪ್ರಾರಂಭಿಸಲಾಗುವುದು ಎಂದು ಪ್ರಕಟಿಸಲಾಗಿದೆ.

ರಾಜ್ಯದ ಬುಡಕಟ್ಟು ಸಂಸ್ಕೃತಿಯನ್ನು ಪರಿಚಯಿಸಲು ನಗರದಲ್ಲಿ ಇರುವ ಬುಡಕಟ್ಟು ಸಂಶೋಧನಾ ಕೇಂದ್ರದ ಆವರಣದಲ್ಲಿ ಬುಡಕಟ್ಟು ವಸ್ತು ಸಂಗ್ರಹಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಮೈಸೂರು ವಿಮಾನ ನಿಲ್ದಾಣದ ರನ್‌ ವೇ ವಿಸ್ತರಣೆಯ ಭೂ ಸ್ವಾಧೀನಕ್ಕಾಗಿ 319 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಅನುವಾಗುವಂತೆ ಯುಟಿಲಿಟಿ ಶಿಫ್ಟಿಂಗ್‌ಗೆ ಅಗತ್ಯ ಕ್ರಮವಹಿಸಲಾಗುವುದು. ಪೊಲೀಸ್ ಇಲಾಖೆಯ ಬಲವರ್ಧನೆಗಾಗಿ- ಮೈಸೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪಿಸಲಾಗುವುದು. ನಗರದ ವ್ಯಾಪ್ತಿಯಲ್ಲಿ 3 ಕೋಟಿ ರು. ವೆಚ್ಚದಲ್ಲಿ ಹೊಸ ಅಗ್ನಿ ಶಾಮಕ ಠಾಣಾ ಕಟ್ಟಡವನ್ನು ನಿರ್ಮಿಸಲು ಕ್ರಮವಹಿಸಲಾಗುವುದು.

ಈಗಿನ ಗ್ರಾಮಾಂತರ ಬಸ್ ನಿಲ್ದಾಣ ಕಿಷ್ಕಿಂಧೆಯಾಗಿರುವುದರಿಂದ ಸುಗಮ ಸಂಚಾರಕ್ಕಾಗಿ ನಗರದ ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್‌ನಿಲ್ದಾಣವನ್ನು ಒಟ್ಟಾರೆ 120 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು ನಬಾರ್ಡ್ ಸಹಯೋಗದಲ್ಲಿ ಸ್ಥಾಪಿಸಲಾಗುವುದು. ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.

ನಗರದಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರು. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು. ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025- 26ನೇ ಸಾಲಿನಿಂದ 7ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿವರೆಗೆ ಮೇಲ್ದರ್ಜೆಗೇರಿಸಲಾಗುವುದು.

ವರುಣ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ನಬಾರ್ಡ್ ಸಹಯೋಗದಲ್ಲಿ 60 ಕೋಟಿ ರು. ಅನುದಾನ ಒದಗಿಸಿ ಪ್ರಸಕ್ತ ವರ್ಷದಲ್ಲಿ ಸದರಿ ಕೇಂದ್ರಗಳನ್ನು ಕಾರ್ಯಾರಂಭ ಮಾಡಲಾಗುವುದು.

ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿರುವ ಕಾರ್ಯಕ್ರಮಗಳಾದ ಮೈಸೂರಿನ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ವಲಯದಲ್ಲಿ ಕರ್ನಾಟಕದ ನಾಯಕತ್ವವನ್ನು ಮತ್ತಷ್ಟು ಬಲಪಡಿಸಲು, ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೊವೇಷನ್ ಡಿಸ್ಟ್ರಿಕ್ಟ್ ಅನ್ನು ಮೈಸೂರಿನಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಎಲೆಕ್ಟ್ರಾನಿಕ್ಸ್‌ ಉತ್ಪಾದನೆಗೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸಲು ಮೈಸೂರಿನ 150 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಪ್ರಿಂಟೆಡ್‌ಸರ್ಕ್ಯೂಟ್‌ ಬೋರ್ಡ್‌ ಪಾರ್ಕ್‌ ಅಭಿವೃದ್ಧಿಪಡಿಸಲಾಗುತ್ತಿದೆ. (ಪುಟ-132).

ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರು. ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ. ಇದು ವರುಣ ಕ್ಷೇತ್ರ ವ್ಯಾಪ್ತಿಯ ಇಮ್ಮಾವು ಬಳಿ ತಲೆಎತ್ತಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ