ಕನ್ನಡಪ್ರಭ ವಾರ್ತೆ ಮಡಿಕೇರಿ ಇಡೀ ವಿಶ್ವದಲ್ಲಿ ಭಾರತವು ಶ್ರೇಷ್ಠ ಸಂವಿಧಾನ ಹೊಂದಿದ್ದು, ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದನ್ನು ಪ್ರತಿಪಾದಿಸಲಾಗಿದೆ. ಅದರಂತೆ ಪ್ರತಿಯೊಬ್ಬರೂ ನಡೆದುಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಭಾರತದ ಪ್ರಜೆಗಳಾದ ಪ್ರತಿಯೊಬ್ಬರೂ ಸಮನಾಗಿ ಬದುಕುವ ಹಕ್ಕು ಹೊಂದಿದ್ದಾರೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಪ್ರತಿ ಕ್ಷೇತ್ರದಲ್ಲೂ ಸಹ ಸಮಾನ ಅವಕಾಶವನ್ನು ಹೊಂದಿದ್ದಾರೆ ಎಂದು ಹೇಳಿದರು.
ಸಂವಿಧಾನದಡಿ ಪ್ರತಿಯೊಬ್ಬರೂ ಸಮಾನರಾಗಿದ್ದು, ಬಡವ-ಬಲ್ಲಿದ, ಮೇಲು-ಕೀಲು ಎಂಬುದಿಲ್ಲ. ರಾಷ್ಟ್ರದಲ್ಲಿ ಯಾರೂ ಸಹ ಅಸಮಾನತೆ ಹೊಂದಿರಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದರು.ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಅಂಬೇಡ್ಕರ್ ಒಬ್ಬ ವ್ಯಕ್ತಿಯಲ್ಲ. ಅವರೊಬ್ಬ ಬಹುಮುಖ ಪ್ರತಿಭೆ ವ್ಯಕ್ತಿತ್ವ ಹೊಂದಿರುವ ಸಮತಾವಾದಿ, ಸಂವಿಧಾನ ಶಿಲ್ಪಿ ಎಂದರು.
ನಗರಸಭೆ ಸದಸ್ಯ ಮನ್ಸೂರ್ ಮಾತನಾಡಿ ಸಾಮಾಜಿಕ, ಆರ್ಥಿಕ, ರಾಜಕೀಯ ಅಭಿವ್ಯಕ್ತಿ ಹೊಂದಿದ್ದು, ಸಮಾನ ಅವಕಾಶವನ್ನು ಸಂವಿಧಾನ ಒಳಗೊಂಡಿದೆ ಎಂದರು.
ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲ ಕೆ.ಜೆ.ದಿವಾಕರ, ತಹಸೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ನಗರಸಭೆ ಸದಸ್ಯ ಬಶೀರ್, ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಬೊಳ್ಳಜ್ಜೀರ ಅಯ್ಯಪ್ಪ, ಹೊನ್ನಪ್ಪ, ಕಲಾವಿದ ರಾಜು ಮತ್ತು ತಂಡದವರು ಅಂಬೇಡ್ಕರ್ ಕುರಿತು ಕ್ರಾಂತಿ ಗೀತೆ ಹಾಡಿದರು. ನಗರಸಭೆ ಪೌರಾಯುಕ್ತ ವಿಜಯ್ ಸ್ವಾಗತಿಸಿದರು, ಬಾಲಕೃಷ್ಣ ರೈ ವಂದಿಸಿದರು. ಪೂರ್ಣಕುಂಭದೊಂದಿಗೆ ಸ್ವಾಗತ: ಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕಳೆದ 27 ದಿನಗಳಿಂದ ಹಮ್ಮಿಕೊಂಡಿರುವ ಜಾಗೃತಿ ಜಾಥಾ ಅಭಿಯಾನದ ‘ಸ್ತಬ್ಧಚಿತ್ರ’ ಒಳಗೊಂಡ ವಾಹನವನ್ನು ಬುಧವಾರ ನಗರದ ರಾಜಾಸೀಟಿನಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತ ವಿಜಯ್, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ದಲಿತ ಸಂಘರ್ಷ ಸಮಿತಿಯ ಸಂಘಟಕರಾದ ಎಚ್.ಎಲ್.ದಿವಾಕರ, ನಿರ್ವಾಣಪ್ಪ, ಹೊನ್ನಪ್ಪ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳು ಸೇರಿದಂತೆ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳು ಒಳಗೊಂಡು ಕಳೆದ 27 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ನಡೆದಿದೆ.