ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಲೋಕಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.ಐ.5ರಂದು ಡಾ.ಬಾಬು ಜಗಜೀವನ್ ರಾಂ ಅವರ 117 ನೇ ಜನ್ಮ ದಿನ ಮತ್ತು ಏ.14 ರಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಯಾಯ ದಿನಗಳಂದು ಬೆಳಗ್ಗೆ 10.30ಕ್ಕೆ ನಗರದ ಗಾಂಧಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಮುಖಂಡ ಎಚ್.ಎಲ್.ದಿವಾಕರ ಮಾತನಾಡಿ, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಅಂಬೇಡ್ಕರ್ ಪ್ರತಿಮೆ ಇಲ್ಲ. ಆದ್ದರಿಂದ ನಗರದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತಾಗಬೇಕು ಎಂದು ಮನವಿ ಮಾಡಿದರು.ಪೌರಾಯುಕ್ತ ವಿಜಯ್ ಪ್ರತಿಕ್ರಿಯಿಸಿ, ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಂಬಂಧ ಜಾಗ ಅಂತಿಮಗೊಳಿಸಬೇಕಿದೆ ಎಂದು ತಿಳಿಸಿದರು.
ಪ್ರಮುಖರಾದ ಎಸ್.ಸಿ.ಸತೀಶ್ ಮಾತನಾಡಿ, ನಗರದ ಹೊಸ ಖಾಸಗಿ ಬಸ್ ನಿಲ್ದಾಣ ಬಳಿಯ ಉದ್ಯಾನವನ ಅಥವಾ ನಗರದ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬಹುದಾಗಿದೆ ಎಂದು ಸಲಹೆ ಮಾಡಿದರು.ಮತ್ತೊಬ್ಬ ಪ್ರಮುಖರಾದ ಮೋಹನ್ ಮೌರ್ಯ ಮಾತನಾಡಿ, ಪಕ್ಕದ ಜಿಲ್ಲೆಗಳಲ್ಲಿನ ಗ್ರಾಮಗಳಲ್ಲಿಯೂ ಸಹ ಅಂಬೇಡ್ಕರ್ ಪ್ರತಿಮೆ ಇದೆ. ಆದರೆ ಕೊಡಗು ಜಿಲ್ಲಾ ಕೇಂದ್ರದಲ್ಲಿಯೇ ಅಂಬೇಡ್ಕರ್ ಪ್ರತಿಮೆ ನಿರ್ಮಾಣವಾಗಿಲ್ಲ. ಆದ್ದರಿಂದ ಮಾದರಿ ನೀತಿ ಸಂಹಿತೆ ಮುಗಿದ ನಂತರ ಜಿಲ್ಲಾ ಕೇಂದ್ರದಲ್ಲಿ ಸೂಕ್ತ ಜಾಗ ಗುರುತಿಸಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೋರಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಜೂ.4ರ ನಂತರ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ನಿಟ್ಟಿನಲ್ಲಿ ಜಾಗ ಅಂತಿಮಗೊಳಿಸುವಂತೆ ಸಲಹೆ ಮಾಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರಮುಖರಾದ ಪ್ರೇಮ್‌ಕುಮಾರ್, ಪ್ರೇಮ ಕೃಷ್ಣಪ್ಪ, ಜಯರಾಮ, ಸಿದ್ದೇಶ್ವರ, ಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.