ಕನ್ನಡಪ್ರಭ ವಾರ್ತೆ ಮೈಸೂರು ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ.ಅರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಹೇಳಿದರು. ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಡಾ. ಬಾಬು ಜಗಜೀವನ್ ರಾಂ ಜಯಂತಿಯನ್ನು ಏ. 5 ರಂದು ಹಾಗೂ ಏ. 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಕಲಾ ಮಂದಿರದಲ್ಲಿ ಆಚರಿಸಲಾಗುವುದು ಎಂದರು. ಡಾ. ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಗೆ 23 ಕೋಟಿ ಗೆ ಗುರುವಾರ ನಡೆಯುವ ಸಭೆಯಲ್ಲಿ ಅನುಮೋದನೆ ಆಗುತ್ತದೆ. ನಂತರ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಸ್ಥಳೀಯ ಸಂಸ್ಥೆಗಳು ಹಾಗೂ ತಾಪಂ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಪ್ರೋತ್ಸಾಹಕ್ಕೆ ಬಹುಮಾನ ನೀಡುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು. ಇಬ್ಬರು ಮಹನೀಯರ ಜಯಂತಿಗಳ ಆಚರಣೆಯ ಸಂಬಂಧ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲು ಅಗತ್ಯ ಕ್ರಮವಹಿಸಬೇಕು ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಉಪಹಾರ ಹಾಗೂ ನೀರಿನ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಮಾತನಾಡಿ, ಶಿಷ್ಟಾಚಾರದ ಅನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಣ ಮಾಡಿ ಜನಪ್ರತಿನಿಧಿಗಳು ಹಾಗೂ ಮುಖಂಡರಿಗೆ ನೀಡಲಾಗುವುದು. ಜಯಂತಿಗಳ ಬಗ್ಗೆ ಕರಪತ್ರ, ಪೋಸ್ಟರ್, ಬ್ಯಾನರ್ ಹಾಗೂ ಪ್ಲೆಕ್ಸ್ ಗಳನ್ನು ಮುದ್ರಿಸಲಾಗುವುದು. ಜಯಂತಿಗೆ ಭಾಗವಹಿಸುವವರಿಗೆ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು. ಸಮುದಾಯದ ಮುಖಂಡರು ಮಾತನಾಡಿ, ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಯನ್ನು ಬೇಗ ಮುಗಿಸಿ ಬಳಕೆಗೆ ನೀಡಬೇಕು. ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆ ಆಗಬೇಕು. ಸರ್ಕಾರಿ ಶಾಲೆ, ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಜಯಂತಿಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಯುಕೇಶ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಇದ್ದರು.