ಕಾರವಾರ: ಡಾ. ಬಿ.ಆರ್. ಅಂಬೇಡ್ಕರ್ ಭಾರತ ಮತ್ತು ವಿಶ್ವ ಕಂಡ ಮಹಾನ್ ನಾಯಕರಾಗಿದ್ದು, ಪ್ರತಿಯೊಬ್ಬರೂ ಅವರ ಜೀವನದಿಂದ ಕಲಿಯುವುದು ಸಾಕಷ್ಟಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.
ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್ ಉದ್ಘಾಟಿಸಿ, ಅಂಬೇಡ್ಕರ್ ದೇಶದ ಎಲ್ಲ ನಾಗರಿಕರಿಗೂ ಸಮಾನ ಕಾನೂನು ಮತ್ತು ಹಕ್ಕುಗಳನ್ನು ರೂಪಿಸಿದ್ದಾರೆ ಎಂದರು.
ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗಗಳ ನೌಕರರ ಒಕ್ಕೂಟದ ಅಧ್ಯಕ್ಷ ಜಿ.ಡಿ. ಮನೋಜ್ ಉಪನ್ಯಾಸ ನೀಡಿ, ಅಂಬೇಡ್ಕರ್ ಯಾವುದೇ ಒಂದು ವರ್ಗ, ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಇಡೀ ಸಮಾಜದ ಏಳಿಗೆಗಾಗಿ ಶ್ರಮಿಸಿದ್ದರು ಎಂದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ದೀಪಕ್ ಕುಡಾಳಕರ್, ಅಂಬೇಡ್ಕರ್ ಅವರು ಸಂವಿಧಾನದಲ್ಲಿ ದಲಿತರಿಗೆ ಮಾತ್ರವಲ್ಲ, ಪ್ರತಿಯೊಂದು ವರ್ಗದವರಿಗೂ ಸೌಲಭ್ಯಗಳನ್ನು ಒದಗಿಸಿದ್ದಾರೆ. ಪ್ರತಿಯೊಬ್ಬರಿಗೂ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಸಂದೇಶಗಳನ್ನು ನೀಡಿದ್ದು, ಶಿಕ್ಷಣದಿಂದ ಮಾತ್ರ ಗುರಿ ಸಾಧನೆ ಸಾಧ್ಯ ಎಂದು ತಿಳಿಸಿದ್ದು, ಅವರನ್ನು ಪ್ರತಿಯೊಬ್ಬರೂ ಪ್ರತಿದಿನವೂ ನೆನೆಯಬೇಕಿದೆ ಎಂದರು.
ಎಸ್.ಎಸ್.ಎಲ್.ಸಿ. ದ್ವಿತೀಯ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು, ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ ಮತ್ತಿತರರು ಇದ್ದರು. ಇದಕ್ಕೂ ಮುನ್ನ ನಗರಸಭೆ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆ ಹಾಗೂ ಕಲಾತಂಡಗಳಿಂದ ಮೆರವಣಿಗೆ ನಡೆಯಿತು. ಅಂಬೇಡ್ಕರ್ ಕುರಿತು ಗೀತ ಗಾಯನ ನಡೆಯಿತು.