ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಡಾ. ಜಿ. ಶಂಕರ್ ಸೇವೆ ಅನುಕರಣೀಯ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Oct 05, 2025, 01:01 AM IST
04ಶಂಕರ್ | Kannada Prabha

ಸಾರಾಂಶ

ಅಜ್ಜರಕಾಡು ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ನಾಡೋಜ ಡಾ. ಜಿ.ಶಂಕರ್ ಅವರ 70ನೇ ಜನ್ಮದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶಿಕ್ಷಣ ಮತ್ತು ಆರೋಗ್ಯ ಸೇವೆಯಿಂದ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂಬ ಚಿಂತನೆಯೊಂದಿಗೆ ನಾಡೋಜ ಡಾ. ಜಿ.ಶಂಕರ್ ಅವರು ಮಾಡಿರುವ ಸಮಾಜಮುಖಿ ಸೇವೆಗಳು ಸದಾ ಅನುಕರಣೀಯ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಅವರು ನಗರದ ಅಜ್ಜರಕಾಡು ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ನಾಡೋಜ ಡಾ. ಜಿ.ಶಂಕರ್ ಅವರ 70ನೇ ಜನ್ಮದಿನಾಚರಣೆ - ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿ.ಶಂಕರ್ ಅವರ ಸಹಕಾರದಲ್ಲಿ ನಿರ್ಮಾಣವಾದ ಈ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ವಿದ್ಯಾರ್ಥಿನಿಯರು ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಅವರು ಆಯೋಜಿಸಿದ ನೂರಾರು ರಕ್ತದಾನ ಶಿಬಿರಗಳು ಜಿಲ್ಲೆಯಲ್ಲಿ ರಕ್ತದಾನದ ಜಾಗೃತಿ ಮೂಡಿಸಿದ್ದಲ್ಲದೇ ಉಡುಪಿ ಜಿಲ್ಲೆ ರಕ್ತದಾನಿಗಳ ಜಿಲ್ಲೆ ಎಂಬ ಗೌರವಕ್ಕೆ ಪಾತ್ರವಾಗುವಂತೆ ಮಾಡಿದ್ದಾರೆ ಎಂದವರು ಹೇಳಿದರು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಾ. ಜಿ.ಶಂಕರ್, ಈ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿವರ್ಷ ಉತ್ತಮ ಸಾಧನೆಯನ್ನು ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತರುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಯಾಗುವ ಸಂಕಲ್ಪ ಮಾಡಬೇಕು. ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಗೆ ಮುಂದೆಯೂ ವಿಶೇಷ ಆದ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.ಮುಖ್ಯ ಅತಿಥಿಯಾಗಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಅಭಿನಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ಸೋಜನ್ ಕೆ.ಜಿ., ಕ್ಷೇಮ ಪಾಲನಾ ಸಮಿತಿ ಸಂಚಾಲಕಿ ಪ್ರೊ.ನಿಕೇತನ, ಐಕ್ಯುಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ, ವಾಣಿಜ್ಯ ವಿಭಾಗದ ಮುಖ್ಯಸ್ಥ ಕೃಷ್ಣ ಭಟ್ ಭಾಗವಹಿಸಿದ್ದರು. ಡಾ ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು. ಡಾ.ರಾಮಚಂದ್ರ ಪಾಟ್ಕರ್ ವಂದಿಸಿದರು.

PREV

Recommended Stories

ಚಲನಚಿತ್ರ ಪ್ರಶಸ್ತಿ ಪಡೆದ ನಟ, ನಟಿ, ನಿರ್ದೇಶಕರ ಅಭಿಮತ
‘ಅಗತ್ಯ ಬಂದಾಗ ಸೂಕ್ತ ನಿರ್ಧಾರ ಕೈಗೊಳ್ಳೋ ಸಾಮರ್ಥ್ಯ ಪಕ್ಷಕ್ಕಿದೆ’