ಗದಗ: ಉತ್ತರ ಕರ್ನಾಟಕದ ಪ್ರತಿಷ್ಠಿತ ಮಠವಾದ ಗದುಗಿನ ತೋಂಟದಾರ್ಯ ಮಠ ಕೊಡಮಾಡುವ ಪ್ರಸಕ್ತ ಸಾಲಿನ "ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ " ಸಂಶೋಧಕ ಡಾ. ಕಲಬುರ್ಗಿ ಅವರಿಗೆ ಮರಣೋತ್ತರವಾಗಿ ನೀಡಲಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟಿ ಅವರು, ಅ. 3ರಂದು ಬೆಳಗ್ಗೆ 10.30ಕ್ಕೆ ಮಠದ ಆವರಣದಲ್ಲಿ ನಡೆಯುವ ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 7ನೇ ಪುಣ್ಯಸ್ಮರಣೆ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.ತೋಂಟದಾರ್ಯ ಶಿಕ್ಷಣ ಸಂಸ್ಥೆಗಳ ಎಲ್ಲ ನೌಕರರು ಹಾಗೂ ಅಭಿಮಾನಿ ಶಿಷ್ಯರು ಸ್ಥಾಪಿಸಿದ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀಗಳ ಹಾದಿಯಲ್ಲಿ ಸಾಗಿಬಂದ ನಾಡಿನ ಗಣ್ಯರಿಗೆ 2018ರಿಂದ ಪ್ರದಾನ ಮಾಡಲಾಗುತ್ತಿದೆ. ಅದೇ ರೀತಿ 2025ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ವಿವರಿಸಿದರು.
ಪ್ರಶಸ್ತಿಯನ್ನು ಡಾ. ತೋಂಟದ ಸಿದ್ಧರಾಮ ಶ್ರೀಗಳ ಸಾನ್ನಿಧ್ಯದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರ ಪತ್ನಿ ಉಮಾದೇವಿ ಕಲಬುರ್ಗಿ ಅವರು ಸ್ವೀಕರಿಸುವರು. ಸಮ್ಮುಖವನ್ನು ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು, ಶಾಂತಲಿಂಗ ಶ್ರೀಗಳು, ಅರಸಿಕೇರಿ, ಪ್ರಭು ಸ್ವಾಮಿಗಳು ಸಂಡೂರ, ಕೋರಣೇಶ್ವರ ಶ್ರೀಗಳು ವಹಿಸುವರು.ಧಾರವಾಡದ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಕೃತಜ್ಞತಾ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಸಿ.ಸಿ. ಪಾಟೀಲ, ಜಿ.ಎಸ್. ಪಾಟೀಲ, ಎಸ್.ವಿ. ಸಂಕನೂರ, ಡಾ. ಚಂದ್ರು ಲಮಾಣಿ ಹಾಗೂ ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ರಾಮಕೃಷ್ಣ ದೊಡ್ಡಮನಿ ಮಂತಾದವರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಕನ್ನಡಕ್ಕೆ ಅನುವಾದಿಸಿದ ತೌಲನಿಕ ಧರ್ಮದರ್ಶನ ಗ್ರಂಥ ಬಿಡುಗಡೆಯಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಧನೇಶ ದೇಸಾಯಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡರ, ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕೆ.ಎಸ್. ಚೆಟ್ಟಿ, ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ, ಶ್ರೀಮಠದ ವ್ಯವಸ್ಥಾಪಕ ಎಂ.ಎಸ್. ಅಂಗಡಿ, ಚನ್ನಯ್ಯ ಹಿರೇಮಠ, ಕೊಟ್ರೇಶ ಮೆಣಸಿನಕಾಯಿ ಮುಂತಾದವರು ಉಪಸ್ಥಿತರಿದ್ದರು.