ಕನ್ನಡಪ್ರಭ ವಾರ್ತೆ ಮಂಡ್ಯ
ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಡಾ.ಕೆ.ಸಿ.ನಾರಾಯಣಸ್ವಾಮಿ ಅವರು ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿದೆ ಎಂಬ ವಿಶ್ವಾಸವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಕ್ತಪಡಿಸಿದರು. ಅಲ್ಲದೇ, ನೂತನ ಕುಲಪತಿಗಳನ್ನು ಅಭಿನಂದಿಸಿದರು.
ಡಾ.ಕೆ.ಸಿ.ನಾರಾಯಣಸ್ವಾಮಿ ಅವರು ಮಾತನಾಡಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದೆ. ರೈತಕೇಂದ್ರಿತ ಸಂಶೋಧನೆ, ಗುಣಮಟ್ಟದ ಶಿಕ್ಷಣ ಮತ್ತು ಪರಿಣಾಮಕಾರಿ ವಿಸ್ತರಣಾ ಚಟುವಟಿಕೆಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ನಿಕಟಪೂರ್ವ ವಿಶೇಷಾಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ಕೆ.ಎಂ.ಹರಿಣಿಕುಮಾರ್ ಅವರ ಕೊಡುಗೆಯನ್ನು ವಿಶ್ವವಿದ್ಯಾಲಯದ ಎಲ್ಲಾ ಸಿಬ್ಬಂದಿ ಸ್ಮರಿಸಿ ಪ್ರಶಂಸಿಸಿದರು.