ಮಂಗಳೂರು: ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಎಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಕರ್ನಾಟಕ ಸಂಭ್ರಮದಲ್ಲಿ ಮೊದಲ ಬಾರಿಗೆ ನೀಡಲಾದ ಪ್ರತಿಷ್ಠಿತ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ -2025’ನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ‘ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಗುರುವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಪ್ರೊ.ಡಾ. ಎಸ್.ಚಂದ್ರಶೇಖರ್ ಶೆಟ್ಟಿ ಅವರು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ‘ಕರ್ನಾಟಕ ಸಂಭ್ರಮ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದಲ್ಲಿ ಸುಮಾರು 45 ವರ್ಷಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವ ಧರ್ಮೀಯರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಕಳೆದ 31 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ. ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ, ಆರ್ಥಿಕ ಚೈತನ್ಯವನ್ನು ತುಂಬಿದ್ದಾರೆ.