ಬಳ್ಳಾರಿ: ದುಶ್ಚಟಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ಸತ್ಯಂ ಶಿಕ್ಷಣ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷಾ ಹೇಳಿದರು.
ಜಿಲ್ಲಾಡಳಿತ, ಜಿಪಂ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.ಹನ್ನೆರಡನೆಯ ಶತಮಾನದ ಬಸವಣ್ಣನವರ ಕಾಲದಲ್ಲಿನ ಶರಣರು ಸಮ-ಸಮಾಜ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ನಮ್ಮ ದೇಶ ಅತಿ ಹೆಚ್ಚು ಯುವ ಪೀಳಿಗೆಯನ್ನು ಹೊಂದಿದ ದೇಶ. ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೇ ಅವುಗಳನ್ನು ಮೆಟ್ಟಿ ನಿಲ್ಲಬೇಕು. ಯುವಕರು ತಂದೆ-ತಾಯಿಯವರ ಆಶೋತ್ತರಗಳನ್ನು ಈಡೇರಿಸುವಂಥವರಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಂ ಮಾತನಾಡಿದರು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಅಧಿಕಾರಿ ಶರ್ಮಸ್ ವಲಿ, ಮಾದಕ ವಸ್ತು ವ್ಯಸನಿಗಳಾಗಿದ್ದಲ್ಲಿ ರಾಜ್ಯ ಸರ್ಕಾರವು ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿ ಮಾನಸ್ ಎಂಬ 14416 ಉಚಿತ ಸಹಾಯವಾಣಿ ಆರಂಭಿಸಿದ್ದು, ಸಹಾಯವಾಣಿಗೆ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆಯಬಹುದು ಎಂದರು.
ಕಾರ್ಯಕ್ರಮದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತನಾಗುತ್ತೇನೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಬಳ್ಳಾರಿಯ ಹಿಂದುಸ್ತಾನಿ ಗಾಯಕ ನಾಗಭೂಷಣ ಬಾಪುರೆ ಅವರು ವಚನ ಸಂಗೀತ ಪ್ರಸ್ತುತಪಡಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ಗುರುರಾಜ, ಸಿಬ್ಬಂದಿ ವಿಜಯ್ ಕುಮಾರ್, ಮಲ್ಲೇಶಪ್ಪ, ಹನುಮೇಶ, ಹನುಮಂತಪ್ಪ, ತೇಜ, ದಿವಾಕರ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗಮನಸೆಳೆದ ಜಾಗೃತಿ ಜಾಥಾ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ಜಾಥಾಗೆ ಸರ್ಕಾರಿ (ಮಾಪು) ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುಂಕಪ್ಪ ಚಾಲನೆ ನೀಡಿದರು.ಜಾಥಾ ನಗರದ ಸರ್ಕಾರಿ (ಮಾಪು) ಪದವಿ ಪೂರ್ವ ಕಾಲೇಜು ಆವರಣದಿಂದ ಆರಂಭವಾಗಿ ಡಾ. ರಾಜ್‌ಕುಮಾರ್ ರಸ್ತೆಯಲ್ಲಿನ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದ ವರೆಗೆ ತಲುಪಿ ಸಂಪನ್ನಗೊಂಡಿತು.