ಮಡಿಕೇರಿ: ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ನಗರದ ಗಾಂಧಿ ಮೈದಾನಕ್ಕೆ ಭೇಟಿ ನೀಡಿ ದಸರಾ ಕಾರ್ಯಕ್ರಮಗಳ ಸಿದ್ಧತೆ ಪರಿಶೀಲಿಸಿದರು. ದಸರಾ ಕಾರ್ಯಕ್ರಮವನ್ನು ಯಾವುದೇ ಲೋಪವಾಗದಂತೆ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡು ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಧಿಕಾರಿಗಳು ಹಾಗೂ ದಸರಾ ಸಮಿತಿಯ ಪದಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.ಈ ಸಂದರ್ಭದಲ್ಲಿ ವೇದಿಕೆ ನಿರ್ಮಾಣದ ಕುರಿತು ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಅವರಿಂದ ಶಾಸಕರು ಮಾಹಿತಿ ಪಡೆದರು.
13 ಮತ್ತು 14 ರಂದು ಕಾಫಿ ದಸರಾ: ಕಾಫಿ ದಸರಾ ಸಂಚಾಲಕ ಅನಿಲ್ ಎಚ್.ಟಿ. ಅವರು ಕಾಫಿ ದಸರಾ ಕುರಿತು ಶಾಸಕರಿಗೆ ಮಾಹಿತಿ ನೀಡಿದರು.
ಕಾಫಿ ದಸರಾದಲ್ಲಿ 54 ಮಳಿಗೆಗಳಲ್ಲಿ ಕಾಫಿಗೆ ಸಂಬಂಧಿಸಿದ ಮಾಹಿತಿ, ವಿವಿಧ ಉತ್ಪನ್ನಗಳು ಹಾಗೂ ಕಾಫಿಯ ಸವಿಯ ಘಮಲು ಪ್ರವಾಸಿಗರು ಮತ್ತು ಸಾರ್ವಜನಿಕರನ್ನು ಆಕರ್ಷಿಸಲಿದೆ ಎಂದರು.ಹೆಚ್ಚಿನ ಸಂಖ್ಯೆಯಲ್ಲಿ ಕಾಫಿ ಕೃಷಿಕರು ಹಾಗೂ ಸಾರ್ವಜನಿಕರು ಕಾಫಿ ದಸರಾಕ್ಕೆ ಭೇಟಿ ನೀಡಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಮಂತರ್ ಗೌಡ ಅವರು ಮನವಿ ಮಾಡಿದರು.
ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಬಿ.ವೈ., ದಸರಾ ಸಮಿತಿ ಖಜಾಂಚಿ ಸಬಿತಾ, ನಗರಸಭೆ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ದಸರಾ ಸಮಿತಿ ಮಾಜಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.