ಕರಡು ಮತದಾರರ ಪಟ್ಟಿ ಪ್ರಕಟ: ಕೊಪ್ಪಳ ಜಿಲ್ಲೆಯಲ್ಲಿ 10,41,388 ಮತದಾರರು

KannadaprabhaNewsNetwork |  
Published : Aug 25, 2026, 02:30 AM IST
ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಡಿಸಿ ಡಾ. ಸುರೇಶ ಇಟ್ನಾಳ ಸಭೆ ನಡೆಸಿದರು. | Kannada Prabha

ಸಾರಾಂಶ

ಕೊಪ್ಪಳ ಜಿಲ್ಲೆಯಲ್ಲಿ 10,41,388 ಮತದಾರರು ಇದ್ದಾರೆ ಎಂದು ಡಿಸಿ ಡಾ. ಸುರೇಶ ಇಟ್ನಾಳ ತಿಳಿಸಿದ್ದಾರೆ. ಆ. 24ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಆ. 24ರಿಂದ ಸೆ. 23ರ ವರೆಗೆ ಅವಕಾಶವಿದೆ.

ಕೊಪ್ಪಳ: ಜಿಲ್ಲೆಯಲ್ಲಿ 10,41,388 ಮತದಾರರು ಇದ್ದಾರೆ ಎಂದು ಡಿಸಿ ಡಾ. ಸುರೇಶ ಇಟ್ನಾಳ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆ ನಡೆಯುತ್ತಿದ್ದು, ಜಿಲ್ಲೆಯಾದ್ಯಂತ ಆ. 24ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಆ. 24ರಿಂದ ಸೆ. 23ರ ವರೆಗೆ ಅವಕಾಶವಿದೆ. ಅ. 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ ಎಂದರು.

ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ, ಕೊಪ್ಪಳ, ಈ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 10,41,388 ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಎಲ್ಲ ಮತಗಟ್ಟೆ ಮತ್ತು ಜಿಲ್ಲಾ ವೆಬ್‌ಸೈಟ್ https://koppal.nic.in ನಲ್ಲಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ 1200ಕ್ಕಿಂತ ಹೆಚ್ಚು ಮತದಾರರಿರುವ ಕಡೆ 37 ಹೆಚ್ಚುವರಿ ಮತಗಟ್ಟೆಗಳನ್ನು ಸೃಜಿಸಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ 1,352ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಹೆಸರು ಸೇರ್ಪಡೆಗೆ ನಮೂನೆ-6, ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ನಮೂನೆ-6ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ-7 ಹಾಗೂ ತಿದ್ದುಪಡಿಗಾಗಿ ನಮೂನೆ-8ನ್ನು ಆಯಾ ಬೂತ್ ಮಟ್ಟದ ಅಧಿಕಾರಿಗಳಿಗೆ ಅಥವಾ ಇಸಿಐಎನ್‌ಇಟಿ ಮೊಬೈಲ್ ಆ್ಯಪ್ / voters.eci.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ವಿಶೇಷ ಅಭಿಯಾನ: ಆ. 29, 30 ಹಾಗೂ ಸೆ. 5, 6, 12, 13, 19, 20ರಂದು ಅಭಿಯಾನ ಕೈಗೊಳ್ಳಲಾಗುವುದು. ಇದಲ್ಲದೆ ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಗಣತಿ ನಮೂನೆ ಸಲ್ಲಿಸಲು ಸಾಧ್ಯವಾಗದ ಮತದಾರರು ಆ. 24ರಿಂದ ಸೆ. 23ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ನಿಗದಿತ ಘೋಷಣಾ ಪತ್ರದೊಂದಿಗೆ ನಮೂನೆ-6 ಅನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಬಹುದು ಎಂದು ಹೇಳಿದರು.

ಕರಡು ಮತದಾರರ ಪಟ್ಟಿ ವಿತರಣೆ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ಕರಡು ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇದೇ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಚುನಾವಣಾ ತಹಸೀಲ್ದಾರ್‌ ರವಿ ವಸ್ತ್ರದ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಕೃಷ್ಣ ಇಟ್ಟಂಗಿ, ರಾಜು ಬಾಕ್ಳೆ, ಸೋಮನಗೌಡ, ಕೆ.ಎಸ್. ಮೈಲಾರಪ್ಪ, ಮೆಹಬೂಬಪಾಷಾ ಜಮಖಾಂದಾರ್, ಶರಣು ಶೆಟ್ಟರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ ಪ್ರಾರಂಭಿಸಲು ಆಗ್ರಹಿಸಿ ಪ್ರತಿಭಟನೆ
ಹಗಲು ೭ ತಾಸು ತ್ರಿಫೇಸ್ ವಿದ್ಯುತ್‌ಗೆ ಆಗ್ರಹಿಸಿ ಪ್ರತಿಭಟನೆ