ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಬಹುಬೇಗ ಅಣೆಕಟ್ಟೆ ಭರ್ತಿಯಾಯಿತು. ಆದರೆ, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ನೀರನ್ನು ವ್ಯವಸ್ಥಿತವಾದ ರೀತಿಯಲ್ಲಿ ಬಳಕೆ ಮಾಡುವುದರಲ್ಲಿ ವಿಫಲರಾದರು ಎಂದು ದೂರಿದರು.
ಕೆಆರ್‌ಎಸ್ ಅಣೆಕಟ್ಟೆ ನೀರು ನಿರ್ವಹಣೆ ಮಾಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಅಣೆಕಟ್ಟೆಯಲ್ಲಿ ನೀರಿನ ಸಾಮರ್ಥ್ಯ ಕುಸಿದು ಬೆಳೆಗಳಿಗೆ ನೀರಿನ ಸಮಸ್ಯೆ ತಲೆದೂರಿದೆ ಎಂದು ಕಿಡಿಕಾರಿದರು.ತಮಿಳುನಾಡಿಗೆ ನೀರು ಹರಿಸುವಾಗ ಕೆಆರ್‌ಎಸ್ ಅಣೆಕಟ್ಟೆ ವ್ಯಾಪ್ತಿಯ ಕಬಿನಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟೆಗಳಿಂದ ನೀರನ್ನು ಕೆಆರ್‌ಎಸ್‌ಗೆ ಹರಿಸಿಕೊಂಡು ನೀರು ಬಿಡಲಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಪ್ರಮಾಣದ ನೀರನ್ನು ಅಣೆಕಟ್ಟೆಯಲ್ಲಿ ಸಂಗ್ರಹಿಸಿ ಇಟ್ಟುಕೊಳ್ಳಲಾಗುತ್ತಿತ್ತು ಎಂದರು.
ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರು ಹರಿಸುವುದಾಗಿ ಹೇಳಿ ಕೆಲವು ರಾಜಕಾರಣಿಗಳು ತುಮಕೂರು ಜಿಲ್ಲೆಯ ಭಾಗಕ್ಕೆ ಶೇ.90ರಷ್ಟು ನೀರು ತೆಗೆದುಕೊಂಡು ಹೋಗಿದ್ದಾರೆ, ಇದರಿಂದ ನಮ್ಮ ಭಾಗದ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಬೆಳೆಗಳು ಒಣಗಿ ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ಈಗ ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಮಂತ್ರಿಗಳು ಇಲ್ಲದಿರುವುದರಿಂದ ಜಿಲ್ಲಾಧಿಕಾರಿಗಳೇ ಹೆಚ್ಚಿನ ಹೊಣೆ ಹೊರಬೇಕು. ಇಲ್ಲವಾದರೆ ಜಿಲ್ಲೆಯ ರೈತರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಆರ್.ಸೋಮಶೇಖರ್, ಗ್ರಾಪಂ ಮಾಜಿ ಅಧ್ಯಕ್ಷ ಅರಳಕುಪ್ಪೆ ಮಹದೇವು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಕ್ಯಾತನಹಳ್ಳಿ ಚೇತನ್ ಸೇರಿದಂತೆ ಹಲವರು ಇದ್ದರು.