ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು ಮತ್ತು ಹುಲೆಸೆ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಶನಿವಾರಸಂತೆ ವಲಯದ ಹುಲಸೆ ಗ್ರಾಮದ ಕೆರೆಯ ಹೂಳೆತ್ತುವ ಕಾಮಗಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು-ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಹಲವಾರು ಕಾರ್ಯಕ್ರಮಗಳಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವು ಒಂದಾಗಿದ್ದು ಗ್ರಾಮದ ಕೆರೆಯನ್ನು ಹೂಳೆತ್ತಿ ಅಭಿವೃದ್ದಿ ಪಡಿಸುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಕೆರೆಗಳನ್ನು ಹೂಳೆತ್ತುವ ಕಾಮಗಾರಿಯನ್ನು ಮಾಡಲಾಗುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಗ್ರಾಮಾಭಿವೃದ್ಧಿ , ಮಹಿಳೆಯರ ಆರ್ಥಿಕ ಸಬಲಿಕರಣಕ್ಕಾಗಿ ಸ್ವಸಹಾಯ ಗುಂಪುಗಳ ಸ್ಥಾಪನೆ ಪರಿಕಲ್ಪನೆಯಲ್ಲಿ ಅವರು ಸ್ಥಾಪಿಸಿದ ಗ್ರಾಮಾಭಿವೃದ್ಧಿ ಯೋಜನೆಯು ಇಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರ ರೂಪಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕೈಜೋಡಿಸುತ್ತಿದೆ ಎಂದರು.ಕೆರೆ ಹೂಳೆತ್ತುವ ಕಾಮಗಾರಿಯು ಗ್ರಾಮಸ್ಥರ ಸಹಭಾಗಿತ್ವದಲ್ಲಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಗೆ ಗ್ರಾಮಸ್ಥರು ಸಹಕಾರ ನೀಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಭಗವಾನ್, ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ರೋಹಿತ್ ಮಾತನಾಡಿದರು. ಈ ಸಂದರ್ಭ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್, ಹಂಡ್ಲಿ ಗ್ರಾ.ಪಂ. ಉಪಾಧ್ಯಕ್ಷ ಅಶೋಕ್, ಗ್ರಾ.ಪಂ. ಸದಸ್ಯೆ ಉಷಾ, ಶನಿವಾರಸಂತೆ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಕ್ಷಿತ್, ಶನಿವಾರಸಂತೆ ವಲಯ ಮೇಲ್ವಿಚಾರಕ ನಾಗರಾಜ್, ಕೃಷಿ ಮೇಲ್ವಿಚಾರಕ ರಾಜಣ್ಣ, ಬೆಳಾರಳ್ಳಿ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ಪದಾಧಿಕಾರಿಗಳು, ಕೆರೆ ಸಮಿತಿ ಸದಸ್ಯರು, ಗ್ರಾಮಸ್ಥರು, ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.