ನವಲಗುಂದ: ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಬುಧವಾರ ಕೆರೆಯ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರ ಸಂಖ್ಯೆ ನೂರರ ಗಡಿ ತಲುಪಿದ್ದು, ಜನತೆ ಆತಂಕದಲ್ಲಿದ್ದಾರೆ.
ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ 70 ಜನ ಹೋರ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಇನ್ನೂ ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ 9 ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಈಗಾಗಲೇ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಮನೆ, ಮನೆ ಸರ್ವೇ ನಡೆಸಲಾಗಿದ್ದು, ಗ್ರಾಮದ ಒಟ್ಟು 471 ಮನೆಗಳ ಪೈಕಿ ಗುರುವಾರ 183 ಮನೆಗಳ ಸರ್ವೇ ನಡೆಸಿದ ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಷಕಿಯರು ನಾಗರಿಕರಿಗೆ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಸರ್ವೇ ಸಂದರ್ಭದಲ್ಲಿ ಅಸ್ವಸ್ಥಗೊಂಡವರನ್ನು ಸ್ಥಳೀಯವಾಗಿ ಸ್ಥಾಪಿಸಲಾದ ತಾತ್ಕಾಲಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತ ನವಲಗುಂದ ಚೆನ್ನಮ್ಮನ ಜಲಾಶಯದಿಂದ ಗುಡಿಸಾಗರ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದೆ.
ಗ್ರಾಮದಲ್ಲಿ ಗುರುವಾರ ಮತ್ತೆ 9 ಜನ ವಾಂತಿ-ಭೇಧಿಯಿಂದ ಬಳಲುತ್ತಿರುವುದರಿಂದ ಸ್ಥಳೀಯವಾಗಿ ಆರಂಭಿಸಿದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಗ್ರಾಮದ ಕೆರೆಯ ನೀರನ್ನು ಕುಡಿಯದಂತೆ ಗ್ರಾಮಸ್ಥರಿಗೆ ಸೂಚಿಸಲಾಗಿದೆ. ಬುಧವಾರ ನವಲಗುಂದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೆಎಂಸಿಆರ್‌ಐಗೆ ಕಳುಹಿಸಲಾಗಿದೆ ಎಂದು ನವಲಗುಂದ ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಎನ್.ಬಿ. ಕರ್ಲವಾಡ ಹೇಳಿದರು.