ಕೊಪ್ಪಳ:
ಬಿರುಬೇಸಿಗೆಯಿದ್ದು, ಜನರ ದಾಹ ನಿಗಿಸುವುದು ಬಹಳ ಮುಖ್ಯವಾಗಿದೆ. ಹೀಗಾಗಿ, ಯಾವುದೇ ಗ್ರಾಮದಲ್ಲಿಯೂ ನೀರಿನ ಸಮಸ್ಯೆಯಾದರೆ ಸಹಿಸಲಾಗದು, ಮುನ್ನೆಚ್ಚರಿಕೆ ಇರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಎಚ್ಚರಿಸಿದರು.ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದರೆ ಅಂತಹ ಗ್ರಾಮಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು. ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬರಬಹುದು ಎಂಬುದನ್ನು ಅರಿತು ಅದಕ್ಕೆ ಮುಂಚಿತವಾಗಿ ಏನು ಮಾಡಬೇಕೆಂದು ಅಧಿಕಾರಿಗಳು ಯೋಜನೆ ರೂಪಿಸಿಕೊಳ್ಳಬೇಕು ಎಂದರು.ಜನರು ಕರೆ ಮಾಡಿದಾಗ ಅವರ ಕರೆ ಸ್ವೀಕರಿಸುವ ಜತೆಗೆ ಅವರ ಸಮಸ್ಯೆಗೆ ಸ್ಪಂದಿಸಬೇಕು. ಕುಷ್ಟಗಿ, ಕಾರಟಗಿ, ಕನಕಗಿರಿ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಜನರಿಗೆ ಕುಡಿಯುವ ನೀರು ಕೊಡಲು ಶಾಶ್ವತ ಪರಿಹಾರ ಹುಡುಕುವ ಕೆಲಸ ಅಧಿಕಾರಿಗಳು ಮಾಡಬೇಕು. ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಂಡು ಬರುತ್ತದೆ. ಗ್ರಾಮಗಳು ಮಾತ್ರವಲ್ಲದೆ ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವಲ್ಲಿ ಅಧಿಕಾರಿಗಳು ಸಭೆ ಮಾಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಹೇಳಿದರು.
ಕುಡಿಯುವ ನೀರಿಗೆ ಯಾವುದೇ ಹಣದ ಕೊರತೆ ಇಲ್ಲ. ಅವಶ್ಯಕತೆ ಇರುವಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು ಎಂದ ಸಚಿವರು, ಆಯಾ ತಾಲೂಕಿನ ತಹಸೀಲ್ದಾರರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ನೀರಿನ ಸಮಸ್ಯಗಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸಚಿವರು ಸೂಚಿಸಿದರು.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಬರುವ 15ರಿಂದ 20 ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕಾಲಿಕ ಮಳೆಯಾಗಿ ಭತ್ತ ಹಾನಿಯಾದರೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ತಾಲೂಕಿನ ತಹಸೀಲ್ದಾರ್‌ರು ತಕ್ಷಣ ಹಾನಿಯ ವರದಿ ತಯಾರಿಸಿ ರೈತರಿಗೆ ಪರಿಹಾರ ನೀಡಬೇಕು ಎಂದರು.
ಸಭೆಯಲ್ಲಿ ಸಂಸದ ಕೆ. ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.