ಕುಡಿವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ

KannadaprabhaNewsNetwork |  
Published : May 08, 2026, 02:15 AM IST
07ಕೆಪಿಎಲ್‌01 ಕೊಪ್ಪಳ ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಕೊಠಡಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯೂ.ಎಸ್.ಎಂ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯತ್‌ ಸಿಇಓ ವರ್ಣಿತ್‌ ನೇಗಿ ಮಾತನಾಡಿದರು | Kannada Prabha

ಸಾರಾಂಶ

ಜಿಲ್ಲೆಯ ಯಾವುದೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡರೆ ಇದರ ಬಗ್ಗೆ ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ ಆಯಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿಯೇ ಕ್ರಮ ಕೈಗೊಳ್ಳಬೇಕು

ಕೊಪ್ಪಳ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸ್ಥಾಯಿ ಸಮಿತಿ ಕೊಠಡಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯೂ.ಎಸ್.ಎಂ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ಕಾಮಗಾರಿ ಮೊದಲ ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಕೊಳವೆ ಬಾವಿ ತೆಗೆದುಕೊಂಡು ವಿವಿಧ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಈ ಎಲ್ಲ ಕೊಳವೆ ಬಾವಿಗಳ ನೀರನ್ನು ಕಡ್ಡಾಯವಾಗಿ ಪರೀಕ್ಷಿಸಿದ ಬಳಿಕವೇ ನೀರು ಪೂರೈಸಬೇಕು. ಈಗಾಗಲೇ ಎಲ್ಲ ಗ್ರಾಪಂಗಳಲ್ಲಿ ನೀರಿನ ಪರೀಕ್ಷಾ ಕಿಟ್‌ ನೀಡಲಾಗಿದೆ. ಅಗತ್ಯವಿದ್ದಲ್ಲಿ ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸಿ.ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವಿಲ್ಲವೆಂದು ಕಂಡುಬಂದಲ್ಲಿ ತಕ್ಷಣ ಅಂತಹ ನೀರನ್ನು ಬಳಕೆ ಮಾಡದಂತೆ ತ್ವರಿತ ಕ್ರಮವಹಿಸಬೇಕು. ಕುಡಿಯಲು ಯೋಗ್ಯವಿಲ್ಲದ ಬೋರ್‌ವೆಲ್ ಸ್ಥಗಿತಗೊಳಿಸಬೇಕು. ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕವೇ ನಿರಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಯಾವುದೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡರೆ ಇದರ ಬಗ್ಗೆ ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ ಆಯಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿಯೇ ಕ್ರಮ ಕೈಗೊಳ್ಳಬೇಕು. ಎಲ್ಲ ಗ್ರಾಮಗಳಲ್ಲಿರುವ ಓ.ಎಚ್.ಟಿ ಟ್ಯಾಂಕನ್ನು ಪ್ರತಿ ತಿಂಗಳು ಸ್ವಚ್ಛ ಮಾಡಬೇಕು. ಗ್ರಾಮಗಳಲ್ಲಿ ಈಗಾಗಲೇ ಸರಬರಾಜು ಮಾಡುತ್ತಿರುವ ನೀರಿನ ಪೈಪಲೈನ್‌ಗಳಲ್ಲಿ ಯಾವುದೇ ರೀತಿಯ ಸೋರಿಕೆ ಕಂಡುಬಂದಲ್ಲಿ 24 ಗಂಟೆಗಳಲ್ಲಿ ದುರಸ್ಥಿಗೊಳಿಸಿ ನೀರು ಪೂರೈಕೆಯಾಗುವಂತೆ ಸಂಬಂಧಪಟ್ಟ ಅಧಿಕಾರಿ ನೋಡಿಕೊಳ್ಳಬೇಕು. ಖಾಸಗಿ ಬೋರ್‌ವೆಲ್ ಹಾಗೂ ಟ್ಯಾಂಕರ್ ನೀರಿಗೆ ಸರ್ಕಾರದ ನಿಯಮಾನುಸಾರ ದರ ನಿಗದಿಪಡಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೊಪ್ಪಳ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹೇಶ ಶಾಸ್ತ್ರಿ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ವಿಭಾಗಗಳ ಎಇಇ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯೂ.ಎಸ್.ಎಂ) ಸಮಿತಿಯ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಾಣಿ, ಪಕ್ಷಿ ನಿರ್ಲಕ್ಷಿಸಿದರೆ ಪರಿಸರ ನಾಶ: ಈಶ್ವರಪ್ಪ ಹಂಚಿನಾಳ
ಶಿಕ್ಷಕರ ಕೈಯಲ್ಲಿದೆ ಸರ್ಕಾರಿ ಶಾಲೆಗಳ ಭವಿಷ್ಯ: ಆನಂದಗೌಡ ಪಾಟೀಲ