ಬಿ. ಶೇಖರ್ ಗೋಪಿನಾಥಂ
ಮೈಸೂರು ಒಡೆಯುರು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಅರಮನೆ ಮುಂಭಾಗದ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೋಮವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾ ಕಾರ್ಯಕ್ರಮವನ್ನು ಆಚರಣೆ ಮಾಡಿದ್ದೇನೆ. ಇದು ನನಗೆ ದೊರೆತ ಪುಣ್ಯ ಎಂದರು.ದಸರಾ ಮಹೋತ್ಸವಕ್ಕೆ 400 ವರ್ಷಗಳ ಇತಿಹಾಸ ಇದೆ, 1610 ರಲ್ಲಿ ವಿಜಯನಗರ ಸಾಮ್ರಾಜ್ಯ ಪ್ರಾರಂಭವಾಯಿತು, ಅದರ ಪತನದ ನಂತರ ಶ್ರೀರಂಗಪಟ್ಟಣದಲ್ಲಿ ಪ್ರಾರಂಭಿಸಿ, ನಂತರ ಮೈಸೂರು ಒಡೆಯರು ಮೈಸೂರಿನಲ್ಲಿ ಪ್ರಾರಂಭಿಸಿದರು. ನಂತರ ಸರ್ಕಾರದಿಂದ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.
ವಿಧಾನಪರಿಷತ್ತು ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ರಾಜ್ಯದ ಐತಿಹಾಸಿಕ ಶ್ರೀಮಂತ ಪರಂಪರೆ ದಸರಾ, ಕನ್ನಡ ನಾಡಿದ ವಿಶೇಷ ಕಲಾ ಪರಂಪರೆಯನ್ನು ಇಡೀ ಜಗತ್ತಿಗೆ ಪರಿಚಯಿಸುತ್ತದೆ. ಮೈಸೂರು ಮಹಾರಾಜರು ನಾಡಿಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ ಎಂದರು.
ಇದೇ ವೇಳೆ ಬಳ್ಳಾರಿ ಜಿಲ್ಲೆಯ ಲಕ್ಮೀಪುರ ಗ್ರಾಮದ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಎಂ. ವೆಂಕಟೇಶ್ ಕುಮಾರ್ ಅವರಿಗೆ ದಸರಾ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
----
ವಾಸುದೇವಚಾರ್ಯರ ಹೆಸರಲ್ಲೂ ಕಾರ್ಯಕ್ರಮ- ಸಿಎಂ ಭರವಸೆ
ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ವಾಸುದೇವಚಾರ್ಯರ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು, ವಾಸುದೇವಾಚಾರ್ಯರ ಜನ್ಮದಿನ ಅಥವಾ ಅವರು ನಿಧನವಾದ ದಿನವನ್ನು ಆಯ್ಕೆ ಮಾಡಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.