ಮಾದಕ ವಸ್ತುಗಳ ವ್ಯಸನ ಯುವ ಜನತೆಗೆ ಮಾರಕ

KannadaprabhaNewsNetwork |  
Published : Jun 28, 2024, 12:52 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ  | Kannada Prabha

ಸಾರಾಂಶ

ಚಿತ್ರದುರ್ಗ ಎಸ್‌ಜೆಎಂಐಟಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ವಿರೋದಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗಮಾದಕ ವಸ್ತುಗಳ ವ್ಯಸನ ಯುವಜನತೆಗೆ ಮಾರಕವಾಗಿದೆ. ವ್ಯಸನ ಮತ್ತು ಕಳ್ಳ ಸಾಗಾಣಿಕೆಯನ್ನು ಯುವಜನತೆ ಜಾಗೃತಿ ವಹಿಸಿ ತಡೆಗಟ್ಟಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.

ನಗರದ ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಸರ್‌ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಜೂ.26ನ್ನು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಯುವಜನತೆ ವ್ಯಸನದಿಂದ ಹೊರ ತರುವುದು ತುರ್ತು ಅಗತ್ಯಗಳಲ್ಲಿ ಒಂದಾಗಿದೆ. ದೇಶದ ಭವಿಷ್ಯ ರುವಾರಿಗಳಾಗಬೇಕಾದ ಯುವಜನತೆ ಮಾದಕ ವಸ್ತುಗಳ ವ್ಯಸನಿಗಳಾಗುತ್ತಿರುವುದು ಆತಂಕದ ಸಂಗತಿ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ತಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರಪಂಚದ ದೊಡ್ಡ ವ್ಯವಹಾರಗಳಲ್ಲಿ ಡ್ರಗ್ಸ್‌ ಮೊದಲನೆಯದಾಗಿದೆ. ಡ್ರಗ್ಸ್ ಸೇವನೆಯಿಂದ ಅಪರಾಧಗಳು ಪ್ರಾರಂಭವಾಗುತ್ತವೆ. ಯುವಕರು ವ್ಯಸನಿಗಳಾಗುವುದ ತಡಯಬೇಕು. ವಿದ್ಯಾರ್ಥಿಗಳು ಕೂಡಾ ಮಾದಕ ವಸ್ತುಗಳ ಸೇವನೆಯಿಂದ ದೂರವಿರುವ ಶಪಥ ಮಾಡಬೇಕು. ತಂದೆ-ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕೆಂದು ಕಿವಿಮಾತು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಮಾದಕ ವ್ಯಸನಕ್ಕೆ ಒಳಗಾದರೆ ಯುದ್ದವಿಲ್ಲದೇ ದೇಶ ಸರ್ವನಾಶವಾಗುತ್ತದೆ. ಮಾದಕ ವಸ್ತುಗಳು ಮನುಷ್ಯನ ದೇಹ ಮತ್ತು ಮನಸ್ಸು ಹಾಳು ಮಾಡುತ್ತದೆ. ಡ್ರಗ್ಸ್ ಮಾಫಿಯಾ ತಡೆಗಟ್ಟುವ ಸಾಮಾಜಿಕ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಒ. ನಾಗರಾಜ್ ಮಾತನಾಡಿ, ಕಾಲೇಜು, ಹಾಸ್ಟೆಲ್ ಯುವಕರಲ್ಲಿ ಮಾದಕ ವಸ್ತುಗಳ ವ್ಯಸನ ಹೆಚ್ಚಾಗುತ್ತಿದೆ. ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿ ಮಾದಕ ವಸ್ತುಗಳ ದಾಸರಾಗದಂತೆ ತಡೆಯಬೇಕು. ಮನೋವೈದ್ಯರಿಂದ ಮನೋ ಚೈತನ್ಯ ಶಿಬಿರ ಏರ್ಪಡಿಸಿ ಚಿಕಿತ್ಸೆ ಮತ್ತು ಸಮಾಲೋಚನೆಯಿಂದ ಗುಣಪಡಿಸಬೇಕು. ಟೆಲಿಮಾನಸ 14416 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ಚಿಕಿತ್ಸೆ, ಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು.

ಈ ವೇಳೆ ಮನೋವೈದ್ಯ ಡಾ.ಆರ್.ಮಂಜುನಾಥ್ ಉಪನ್ಯಾಸ ನೀಡಿದರು. ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಬಿ.ಭರತ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಕಾಲೇಜಿನ ಎನ್‍ಎಸ್‍ಎಸ್ ಸಂಚಾಲಕ ಡಾ.ನಿರಂಜನ್, ತಾಲೂಕು ಆರೋಗ್ಯಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ