ಸಿಂಧನೂರು: ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದು, ಬಂಧಿತ ಕಣ್ಣಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಆಪ್ತರು. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಕ್ಷಣವೇ ಇಬ್ಬರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ಒತ್ತಾಯಿಸಿದರು.
ಕುಡಚಿ ಮತ ಕ್ಷೇತ್ರದ ಗ್ರಾಮ ಪಂಚಾಯಿತಿ ಒಂದರಲ್ಲಿಯೇ ರು.17 ಕೋಟಿ ಅವ್ಯವಹಾರವಾಗಿದೆ. ಉದ್ಯೋಗ ಖಾತ್ರಿ ಯೋಜನೆ ಕೆಲಸಗಳಲ್ಲಿ ಅಪಾರ ಭ್ರಷ್ಟಾಚಾರ ನಡೆದಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆಯುತ್ತಿರುವ ಸಾವಿರಾರು ಕೋಟಿ ಲೂಟಿಗೆ ಪ್ರಿಯಾಂಕ್ ಖರ್ಗೆ ಪಾಲುದಾರರಾಗಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಚಿವ ಸಂಪುಟದಿಂದ ಪ್ರಿಯಾಂಕ್ ಖರ್ಗೆಯನ್ನು ವಜಾ ಮಾಡಬೇಕು. ಭ್ರಷ್ಟಾಚಾರ ಮತ್ತು ಡ್ರಗ್ಸ್ ಮಾಫಿಯಾ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ ಅವರು ಉದಾಸೀನ ಮಾಡಿದರೆ ರಾಜ್ಯದಾದ್ಯಂತ ಬಿಜೆಪಿ ಪಕ್ಷದಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ತಾಲೂಕು ಗ್ರಾಮೀಣ ಮಂಡಲದ ಅಧ್ಯಕ್ಷ ಯಂಕೋಬ ನಾಯಕ ರಾಮತ್ನಾಳ, ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ರಾಂಪುರ ಉಪಸ್ಥಿತರಿದ್ದರು.