ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ಇತರರ ನೇತೃತ್ವದಲ್ಲಿ ತಮಟೆ ಭಾರಿಸುತ್ತಾ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ನಂತರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಂದುವಾಡ ಮಂಜುನಾಥ, ಸರ್ವೋಚ್ಛ ನ್ಯಾಯಾಲಯದ 7 ನ್ಯಾಯಾಧೀಶರನ್ನು ಒಳಗೊಂಡ ಸಂವಿಧಾನ ಪೀಠವು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯ ಸರ್ಕಾರಕ್ಕೆ ಇದೆ ಎಂಬ ತೀರ್ಪು ನೀಡಿದ್ದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ. ಈ ತೀರ್ಪನ್ನು ರಾಜ್ಯ ಸರ್ಕಾರ ತಕ್ಷಣ ಅನುಷ್ಠಾನಗೊಳಿಸಿ, ಒಳ ಮೀಸಲಾತಿ ನೀಡಬೇಕು. ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನ ಮೂಲಕ ಪರಿಶಿಷ್ಟ ಜಾತಿಯ ಶೋಷಿತ ಸಮುದಾಯಗಳಲ್ಲಿ ಹೊಸ ಭರವಸೆ ಮೂಡಿಸಿದೆ ಎಂದರು.30 ವರ್ಷಗಳಿಂದ ಡಿಎಎಸ್‌ಎಸ್ ಕೈಗೊಂಡ ನಿರಂತರ ಹೋರಾಟಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಜಯ ಸಿಕ್ಕಂತಾಗಿದೆ. ಒಳ ಮೀಸಲಾತಿ ವ್ಯವಸ್ಥೆಯಲ್ಲಿ ಇದು ಅತ್ಯಂತ ಮುಖ್ಯ, ಮಹತ್ವದ ಹೆಜ್ಜೆಯೂ ಆಗಲಿದೆ. ಹಿಂದೆ ಇದೇ ವಿಚಾರದಲ್ಲಿ ಪರಸ್ಪರ ವಿರುದ್ಧ ತೀರ್ಪುಗಳನ್ನು ನ್ಯಾಯಾಲಯಗಳು ನೀಡಿದ್ದವು. ಈಗ ಸಿಜೆಐ ಡಿ.ವೈ.ಚಂದ್ರಚೂಡರ ನೇತೃತ್ವದ 7 ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಈ ವಿಚಾರದಲ್ಲಿದ್ದಂತಹ ಎಲ್ಲಾ ಗೊಂದಲ ಪರಿಹರಿಸಿದೆ ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ಸಮಿತಿಯ ದಾವಣಗೆರೆ ತಾಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಹರಿಹರ ಸಂಚಾಲಕ ಪಿ.ಜೆ.ಮಹಾಂತೇಶ, ಜಿಲ್ಲಾ ಸಂಘಟನಾ ಸಂಚಾಲಕ ಹನುಮಂತಪ್ಪ ಬೇತೂರು, ತಾಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಬಿ.ಚಿತ್ತಾನಹಳ್ಳಿ, ಮಹಿಳಾ ಸಂಚಾಲಕರಾದ ಕೆ.ವಿಜಯಲಕ್ಷ್ಮಿಇತರರು ಇದ್ದರು.