ಹೊಸಪೇಟೆ: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಎಲ್ಲ ವೀರಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಆಗಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ರಾಷ್ಟ್ರಕ್ಕೆ ಸ್ವಾತಂತ್ರ ತಂದು ಕೊಟ್ಟ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರು, ಸುಭಾಶ್ಚಂದ್ರ ಬೋಸ್, ಅಬ್ದುಲ್ ಕಲಾಂ ಆಜಾದ್, ಭಗತ್ ಸಿಂಗ್, ಚಂದ್ರಶೇಖರ ಅಜಾದ್, ರಾಜ್ ಗುರು, ಸುಖ್ ದೇವ್ ಸೇರಿದಂತೆ ಸಾವಿರಾರು ವೀರಯೋಧರನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಪಂಚ ಗ್ಯಾರಂಟಿ ಅನುಷ್ಠಾನಗೊಳಿಸಿದ್ದೇವೆ. ಆರಂಭದಲ್ಲಿ ಈ ಯೋಜನೆಗಳ ಬಗ್ಗೆ ಅನೇಕ ಟೀಕೆಗಳು ಬಂದವು ಎಂದ ಅವರು, ಬಡವರಿಗೆ ಮನೆ ಕಟ್ಟಿಕೊಡುವ 6ನೇ ಗ್ಯಾರಂಟಿ ಘೋಷಣೆ ಮಾಡಿರಲಿಲ್ಲ. ಆದರೆ, ಬಡಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆ ನೀಡುವ ಚಿಂತನೆ ಮಾಡಲಾಗಿದೆ. ಸ್ಲಂ ಬೋರ್ಡ್‌ನಿಂದ 1,80,253 ಮತ್ತು ರಾಜೀವ್ ಗಾಂಧಿ ವಸತಿ ನಿಗಮದಿಂದ 47860 ಮನೆ ಸೇರಿ 2,30,000 ಮನೆಯನ್ನು ಈ ಹಿಂದಿನ ನಮ್ಮ ಸರ್ಕಾರದಲ್ಲಿ ಮಂಜೂರು ಮಾಡಲಾಗಿತ್ತು. ಇವುಗಳು ಕಾರಣಾಂತರದಿಂದ ಹಂಚಿಕೆಯಾಗಲಿಲ್ಲ, ಮುಂದಿನ ದಿನಗಳಲ್ಲಿ ಹಂತ- ಹಂತವಾಗಿ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದರು.ವಸತಿ ರಹಿತರ ಸಮಸ್ಯೆಗಳಿಗೆ ಸ್ಪಂದಿಸಿ 36799 ಮನೆ ನೀಡಿದ್ದು ₹ 500 ಕೋಟಿ ಬಿಡುಗಡೆ ಮಾಡಲಾಗಿದೆ. 2026ರ ಅಂತ್ಯದೊಳಗೆ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸೂರು ಒದಗಿಸುವ ಯೋಜನೆಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳಾಗಿದ್ದು, ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದರು.
ಆಕರ್ಷಕ ಪಥಸಂಚಲನ: ಪರೇಡ್ ಕಮಾಂಡರ್ ಗೋವಿಂದ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಪೌರಕಾರ್ಮಿಕರು ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಒಳಗೊಂಡಂತೆ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಶಾಸಕ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಎನ್. ರೂಪೇಶಕುಮಾರ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣಪ್ಪ, ಎಸ್ಪಿ ಅರುಣಾಂಗ್ಷು ಗಿರಿ, ಜಿಪಂ ಸಿಇಒ ಅಲಿ ಅಕ್ರಮ್ ಷಾ ಇದ್ದರು.