ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಸರ್ಕಾರ ಏಳನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಗ್ರಾಮಗಳ ರೈತರು, ಬುಡಕಟ್ಟು ಜನಾಂಗ ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ತಿಳಿಸಿದ್ದಾರೆ.
ಕಾರ್ಕಳ: ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಸರ್ಕಾರ ಏಳನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಗ್ರಾಮಗಳ ರೈತರು, ಬುಡಕಟ್ಟು ಜನಾಂಗ ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ತಿಳಿಸಿದ್ದಾರೆ.ಹಿಂದೆ 2024ರಲ್ಲಿ ಪ್ರಕಟಗೊಂಡಿದ್ದ ಕರಡು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದ್ದ ಬಹುತೇಕ ಅಂಶಗಳೇ ಪ್ರಸ್ತುತ ಪ್ರಕಟಿಸಿರುವ ಕರಡಿನಲ್ಲೂ ಮುಂದುವರಿದಿವೆ. ಇದರಿಂದ ಪಶ್ಚಿಮಘಟ್ಟದ ವ್ಯಾಪ್ತಿಯಲ್ಲಿರುವ ಜನವಸತಿ ಪ್ರದೇಶಗಳ ಭವಿಷ್ಯ, ಕೃಷಿ ಚಟುವಟಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಜನರಲ್ಲಿ ಗೊಂದಲ ಮತ್ತು ಆತಂಕ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ಜನರ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೂಡಲೇ ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಿಂದ ಹೊರಗಿಡುವ ಕ್ರಮ ಕೈಗೊಳ್ಳಬೇಕು. ಕೃಷಿ, ತೋಟಗಾರಿಕೆ ಚಟುವಟಿಕೆಗಳು, ಸ್ಥಳೀಯರ ಜೀವನೋಪಾಯ ಹಾಗೂ ರಸ್ತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಅಲ್ಲದೆ, ಕೇಂದ್ರ ಸರ್ಕಾರದ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರವು ಸೂಕ್ತ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ಕರಡು ಅಧಿಸೂಚನೆಯಲ್ಲಿ ಒಳಗೊಂಡಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ತುರ್ತಾಗಿ ಗ್ರಾಮಸಭೆಗಳನ್ನು ನಡೆಸಿ, ಅಧಿಸೂಚನೆಯ ಪರಿಣಾಮಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಅಲ್ಲದೆ, ಸ್ಥಳೀಯರಿಂದ ಆಕ್ಷೇಪಣೆ ಹಾಗೂ ಸಲಹೆ ಸ್ವೀಕರಿಸಿ ಸರ್ಕಾರದ ಮಟ್ಟದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಗಂಗಾಧರ ಗೌಡ ಒತ್ತಾಯಿಸಿದ್ದಾರೆ.
ಪಶ್ಚಿಮಘಟ್ಟದ ಪರಿಸರ ಸಂರಕ್ಷಣೆಯ ಜೊತೆಗೆ ಅಲ್ಲಿನ ನಿವಾಸಿಗಳ ಹಕ್ಕು, ಜೀವನೋಪಾಯ ಹಾಗೂ ಅಭಿವೃದ್ಧಿಗೂ ಸಮಾನ ಆದ್ಯತೆ ನೀಡುವ ಮೂಲಕ ಸರ್ಕಾರ ಜನರಲ್ಲಿರುವ ಆತಂಕವನ್ನು ನಿವಾರಿಸಬೇಕು ಎಂದು ಅವರು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.