ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಗ್ಯಾರಂಟಿಗಳಿಂದ ಆರ್ಥಿಕ ಸಬಲೀಕರಣ

KannadaprabhaNewsNetwork | Published : Jun 11, 2025 12:03 PM

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು.

ಕೊಪ್ಪಳ:

ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅರ್ಹರೆಲ್ಲರೂ ಯೋಜನೆ ವ್ಯಾಪ್ತಿಗೆ ಒಳಪಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆ ಬಗೆಹರಿಸಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದರು.

ಅನ್ನಭಾಗ್ಯ ಯೋಜನೆಯಡಿ ಅರ್ಹ ಪಡಿತರ ಚೀಟಿದಾರರ ಪ್ರತಿ ಸದಸ್ಯರಿಗೆ ಹೆಚ್ಚುವರಿ ಐದು ಕೆಜಿ ಒಳಗೊಂಡಂತೆ ಒಟ್ಟು ಹತ್ತು ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಜನರು ಈ ಅಕ್ಕಿಯನ್ನು ಮಾರಾಟ ಮಾಡುತ್ತಿರುವ ಪ್ರಕರಣ ಕಂಡು ಬರುತ್ತಿವೆ. ಹೀಗಾಗಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಅಥವಾ ಇತರೆ ಆಹಾರ ಸಾಮಗ್ರಿ ವಿತರಿಸಿದರೆ ಜನರಿಗೆ ಅನುಕೂಲವಾಗಲಿದೆ. ಇದರ ಜತೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯ ಅನಧಿಕೃತ ಮಾರಾಟ ಸಹ ತಡೆಯಬಹುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಇತರೆ ಆಹಾರ ಸಾಮಗ್ರಿ ವಿತರಿಸಲು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಜನರ ಅನಿಸಿಕೆ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳಬೇಕು ಎಂದರು.

5 ಗ್ಯಾರಂಟಿ ಯೋಜನೆಗಳ ಪ್ರಗತಿ:

ಗೃಹಲಕ್ಷ್ಮಿ ಯೋಜನೆಯಡಿ ಏಪ್ರಿಲ್‌ ಅಂತ್ಯದ ವರೆಗೆ ಜಿಲ್ಲೆಯ 3,26,014 ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಸಂದಾಯ, ಗೃಹಜ್ಯೋತಿ ಯೋಜನೆಯಡಿ 2,75,936 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ₹ 243.37 ಕೋಟಿ ಖರ್ಚು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ 2,99,213 ಕಾರ್ಡುದಾರರಿಗೆ ಫೆಬ್ರವರಿಯಿಂದ ಈ ವರೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಶಕ್ತಿ ಯೋಜನೆಯಡಿ ಮೇ ನಲ್ಲಿ 34,77,996 ಮಹಿಳೆಯರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು ₹ 15,04,44,105 ಖರ್ಚಾಗಿದೆ. ಯುವನಿಧಿ ಯೋಜನೆಯಡಿ ಮೇ ವರೆಗೆ 8,881 ಫಲಾನುಭವಿಗಳು ನೋಂದಣಿಯಾಗಿದ್ದು, ₹ 11.58 ಕೋಟಿ ಪಾವತಿಸಲಾಗಿದೆ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ. ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ. ಮತ್ತು ಖಾಸಿಂಸಾಬ್‌ ಮರ್ದಾನಸಾಬ್‌, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಇತರರು ಇದ್ದರು.