ಪ್ರತಿ ಮಗುವಿಗೂ ಶಿಕ್ಷಣ ಕೊಡಿಸಿ: ಪದ್ಮಶ್ರೀ ಆರ್. ಪಾಟೀಲ

KannadaprabhaNewsNetwork |  
Published : Jul 01, 2024, 01:46 AM IST
ಮುಂಡರಗಿ ಸ್ವಾಮಿ ವಿವೇಕಾಂದ ಪ್ರಾಥಮಿಕ ಶಾಲೆಯಲ್ಲಿ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನವನ್ನುಆಚರಿಸಾಯಿತು. | Kannada Prabha

ಸಾರಾಂಶ

ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ, ನೈತಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯನ್ನು ತಡೆಗಟ್ಟುತ್ತದೆ.

ಮುಂಡರಗಿ: ಶಿಕ್ಷಣದಿಂದ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆತರಲು ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ಪದ್ಮಶ್ರೀ ಆರ್. ಪಾಟೀಲ ಹೇಳಿದರು.

ಅವರು ಶುಕ್ರವಾರ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮುಂಡರಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕಾ ಆಡಳಿತ, ತಾಲೂಕು ವಕೀಲರ ಸಂಘ, ಕಾರ್ಮಿಕ ಇಲಾಖೆ ಮತು ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ, ನೈತಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯನ್ನು ತಡೆಗಟ್ಟುತ್ತದೆ. ವಿದ್ಯೆ ನಮಗೆ ಬಹಳ ಮುಖ್ಯ. ವಿದ್ಯೆಯನ್ನು ಯಾರೂ ಕಸಿದುಕೊಳ್ಳಲು ಬರುವುದಿಲ್ಲ. ಆದ್ದರಿಂದ ಎಲ್ಲರೂ ಶಿಕ್ಷಣವಂತರಾಗಬೇಕು. ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು. ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.

ಉದ್ಯೋಗ ಮತ್ತು ಪ್ರಕ್ರಿಯಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದರು.

ಮುಂಡರಗಿ ಕಾರ್ಮಿಕ ನಿರೀಕ್ಷಕಿ ಭುವನೇಶ್ವರಿದೇವಿ ಕೋಟಿಮಠ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಮಾತನಾಡಿದರು. ಬಾಲ ಕಾರ್ಮಿಕರನ್ನು ನೇಮಿಸಿಕೊಂಡರೆ ಇರುವ ಕಾನೂನು ಶಿಕ್ಷೆ ಮತ್ತು ದಂಡದ ಬಗ್ಗೆ ಹೇಳಿ, ಜನರು ಮತ್ತು ಮಕ್ಕಳು ಈ ಕುರಿತು ಜಾಗ್ರತರಾಗಬೇಕು. ಎಲ್ಲಿಯಾದರೂ ಸಣ್ಣ ಮಕ್ಕಳು ಕೆಲಸ ಮಾಡುವುದು ಕಂಡರೆ ತಕ್ಷಣವೇ ಮಕ್ಕಳ ಸಹಾಯವಾಣಿಗೆ ಪೋನ್ ಮಾಡಬೇಕು ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಸಿ.ಎಸ್. ಅರಸನಾಳ ಅಧ್ಯಕ್ಷತೆ ವಹಿಸಿದ್ದರು. ಮುಂಡರಗಿ ದಿವಾಣಿ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿಯ ಜ್ಯೋತಿ ಕಾಗಿನಕರ, ವಕೀಲರ ಸಂಘದ ಅಧ್ಯಕ್ಷ ಯು.ಸಿ. ಹಂಪಿಮಠ, ಮುಖ್ಯೋಪಾಧ್ಯಾಯ ದೇವರಡ್ಡಿ ಇಮ್ರಾಪುರ, ಪ್ರಾಥಮಿಕ ಶಾಲಾ ಮಖ್ಯೋಪಾಧ್ಯಾಯ ಪರಮೇಶ ನಾಯಕ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಗುಡದೀರಪ್ಪ ಲಿಂಗಶೆಟ್ಟರ್ ಕಾರ್ಯಕ್ರಮ ನಿರೂಪಿಸಿದರು. ದೇವರಡ್ಡಿ ಇಮ್ರಾಪುರ ವಂದಿಸಿದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ