ಕನ್ನಡಪ್ರಭ ವಾರ್ತೆ ಸಂಕೇಶ್ವರ ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಮಹತ್ವದ ಹಂತವಾಗಿದ್ದು, ಶಿಸ್ತು, ಗುರಿ ಹಾಗೂ ನಿರಂತರ ಕಲಿಕೆಯ ಮನೋಭಾವ ಅಳವಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಅರ್ಥಪೂರ್ಣ ಸಾಧನೆ ಸಾಧ್ಯ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಡಾ.ಶಿವಲಿಂಗೇಶ್ವರ ಮಹಾಸ್ವಾಮೀಜಿ ನುಡಿದರು
ಕನ್ನಡಪ್ರಭ ವಾರ್ತೆ ಸಂಕೇಶ್ವರ
ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಮಹತ್ವದ ಹಂತವಾಗಿದ್ದು, ಶಿಸ್ತು, ಗುರಿ ಹಾಗೂ ನಿರಂತರ ಕಲಿಕೆಯ ಮನೋಭಾವ ಅಳವಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಅರ್ಥಪೂರ್ಣ ಸಾಧನೆ ಸಾಧ್ಯ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಡಾ.ಶಿವಲಿಂಗೇಶ್ವರ ಮಹಾಸ್ವಾಮೀಜಿ ನುಡಿದರು.ಸಮೀಪದ ನಿಡಸೋಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಶುಭಾರಂಭ-2026 ಇಂಡಕ್ಷನ್ ಪ್ರೋಗ್ರಾಂ ಉದ್ಘಾಟನಾ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಶಿಕ್ಷಣವು ಕೇವಲ ಉದ್ಯೋಗದ ಸಾಧನವಲ್ಲ, ಉತ್ತಮ ವ್ಯಕ್ತಿತ್ವ, ಸಂಸ್ಕಾರ ಹಾಗೂ ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಶಕ್ತಿಯಾಗಿದೆ. ಶಿಕ್ಷಣದ ಜತೆಗೆ ಮೌಲ್ಯಗಳನ್ನು ಅಳವಡಿಸಿಕೊಂಡ ವಿದ್ಯಾರ್ಥಿಗಳೇ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ನಾಗರಿಕರಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು.ಜಿ.ಐ.ಟಿ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನಿಖಿಲ್ ಇನಾಮದಾರ ಮಾತನಾಡಿ, ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಜ್ಞಾನದೊಂದಿಗೆ ಸೃಜನಶೀಲತೆ, ಸಂವಹನ ಕೌಶಲ್ಯ, ನಾಯಕತ್ವ ಗುಣ ಹಾಗೂ ಸಮಸ್ಯೆಗಳನ್ನು ವಿಶ್ಲೇಷಿಸಿ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಅತ್ಯಗತ್ಯವಾಗಿದೆ. ಕಾಲೇಜು ದಿನಗಳಲ್ಲಿಯೇ ಇಂತಹ ಕೌಶಲ್ಯಗಳನ್ನು ಬೆಳೆಸಿಕೊಂಡರೇ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗ ಹಾಗೂ ಯಶಸ್ವಿ ವೃತ್ತಿಜೀವನದ ಅವಕಾಶಗಳು ಹೆಚ್ಚಾಗುತ್ತವೆ ಎಂದು ತಿಳಿಸಿದರು.ಪಾಲಕರ ಪ್ರತಿನಿಧಿ ಹಾಗೂ ನಿವೃತ್ತ ಮುಖ್ಯಾಧ್ಯಾಪಕ ಬಿ.ಎನ್.ರುದ್ರಾಪುರೆ ಮಾತನಾಡಿ, ಸ್ಪಷ್ಟ ಗುರಿಯೊಂದಿಗೆ ನಿರಂತರ ಪರಿಶ್ರಮ ನಡೆಸಿದರೆ ಯಾವುದೇ ಸಾಧನೆ ಅಸಾಧ್ಯವಲ್ಲ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜ್ಞಾನ ಹಾಗೂ ಕೌಶಲ್ಯದ ಮೂಲಕ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಆರ್.ಉಮರಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಡಸೋಸಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳ ಸವಾರ್ಂಗೀಣ ಬೆಳವಣಿಗೆಗೆ ಅಗತ್ಯವಾದ ಎಲ್ಲ ಶೈಕ್ಷಣಿಕ ಹಾಗೂ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸಿವೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜ್ಞಾನ, ಕೌಶಲ್ಯ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಪ್ರೊ.ಎ.ಕೆ.ಅಂಗಡಿ ಸ್ವಾಗತಿಸಿದರು. ಎಸ್.ಎಂ.ಬಾಗೇವಾಡಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ.ಯು.ಎಸ್.ಗುಡ್ನವರ ಹಾಗೂ ಪ್ರೊ.ಎಸ್.ಐ.ಬೆಳವಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕೋಟ್.....
ಶಿಕ್ಷಣವು ಜ್ಞಾನಾರ್ಜನೆಗೆ ಮಾತ್ರ ಸೀಮಿತವಾಗದೇ ಸಂಸ್ಕಾರ, ಸಾಮಾಜಿಕ ಹೊಣೆಗಾರಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪ್ರಕ್ರಿಯೆಯಾಗಬೇಕು. ಉತ್ತರ ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಮಠ, ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾಗಿದ್ದು, ಆ ಪರಂಪರೆಯನ್ನು ಮುಂದುವರಿಸುವ ಹೊಣೆಗಾರಿಕೆ ಇಂದಿನ ವಿದ್ಯಾರ್ಥಿಗಳ ಮೇಲಿದೆ. ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.