ಹಾವೇರಿ: ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಪ್ರೋತ್ಸಾಹಿಸಬೇಕು ಎಂದು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ನಮ್ಮ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ನೆರವು ನೀಡುತ್ತಿದೆ. ಅಂಬೇಡ್ಕರ್ ಭವನ ಸೇರಿದಂತೆ ಸಮುದಾಯದ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದೆ, ಸರ್ಕಾರದಿಂದ ದೊರೆಯುವ ಶಿಕ್ಷಣ ಮತ್ತು ತರಬೇತಿ ಸೌಲಭ್ಯಗಳನ್ನು ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕು ವಿಶೇಷವಾಗಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳಿಗೆ ಐಎಎಸ್, ಐಪಿಎಸ್ ಪರೀಕ್ಷೆಗಳ ಮಹತ್ವದ ಕುರಿತು ತಿಳಿ ಹೇಳಿ ಅವರಿಗೆ ಅಂತಹ ಪರೀಕ್ಷೆಗಳ ತರಬೇತಿ ಕಾರ್ಯಕ್ರಮಗಳ ಅರಿವು ಮೂಡಿಸಬೇಕು ಎಂದರು.
ಜಯಂತಿಗಳ ಆಚರಣೆಗಳು ಕೇವಲ ಮೆರವಣಿಗೆಗಳಿಗೆ ಸೀಮಿತವಾಗದೆ ವಾಲ್ಮೀಕಿ ರಾಮಾಯಣವನ್ನು ಓದುವ ಮತ್ತು ಅದರ ಆದರ್ಶಗಳನ್ನು ಜೀವನದಲ್ಲಿ ಪಾಲಿಸುವ ಮೂಲಕ ಮಹರ್ಷಿಯವರ ಆಶಯಗಳಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.ರಾಣಿಬೆನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ. ಹೊನ್ನಪ್ಪ ಹೊನ್ನಮ್ಮನವರ ಅವರು ಮಹರ್ಷಿ ವಾಲ್ಮೀಕಿಯವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದಕ್ಕೂ ಮುನ್ನ ನಗರದ ವಾಲ್ಮೀಕಿ ವೃತ್ತದಿಂದ ಜಿಲ್ಲಾ ವಾಲ್ಮೀಕಿ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ವಿವಿಧ ಕಲಾತಂಡಗಳು, ಡೊಳ್ಳು ಹಾಗೂ ನೃತ್ಯ ತಂಡಗಳ ಪ್ರದರ್ಶನ ಮೆರವಣಿಗೆಗೆ ಮೆರುಗು ನೀಡಿದವು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹನುಮಂತಪ್ಪ ಮರಗಡಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜಿತ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಎಲ್.ನಾಗರಾಜ್, ತಹಸೀಲ್ದಾರ್ ಶರಣಮ್ಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ. ಮಂಜಾನಾಯ್ಕ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.