ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ, ಚಿಕ್ಕಮಗಳೂರಿನಲ್ಲಿ ಜನಜಾಗೃತಿ ಜಾಥಾ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕವಾಗಿದ್ದು, ಅಂಥ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿ ದಾಗಲೇ ಪರಿಹಾರ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ರೋಟರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲೆಂದೇ ಸರ್ಕಾರ ಹಲವಾರು ಯೋಜನೆ, ಕಾರ್ಯ ಕ್ರಮಗಳನ್ನು ರೂಪಿಸಿದೆ. ಪರಿಣಾಮಕಾರಿ ಕಾನೂನುಗಳನ್ನು ರಚಿಸಿದೆ. ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವೆಂದು ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದ ಅವರು, ಸರ್ಕಾರವಲ್ಲದೇ ಸರ್ಕಾರೇತರ ಸಂಘ ಸಂಸ್ಥೆಗಳು ಜೊತೆಗೂಡಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, 6 ವರ್ಷದ ಪ್ರತಿ ಮಕ್ಕಳನ್ನು ಶಾಲೆಗೆ ಸೇರಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಜಿಲ್ಲೆಯಲ್ಲಿ ಕಳೆದ ವರ್ಷ 18ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದು ಕೇವಲ ಸರ್ಕಾರ, ಸಂಘ ಸಂಸ್ಥೆಗಳಿಂದ ಮಾತ್ರವಲ್ಲ ಇದರ ನೈತಿಕ ಜವಾಬ್ದಾರಿಯನ್ನು ಎಲ್ಲರೂ ಹೊರ ಬೇಕು. ಸರ್ಕಾರ ಮಕ್ಕಳಿಗಾಗಿ ಹಲವಾರು ಯೋಜನೆ ರೂಪಿಸಿದ್ದು, ಉಚಿತ ಶಿಕ್ಷಣ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ನಾಗರಿಕರು ತಮ್ಮ ಮಕ್ಕಳನ್ನು ಸಮಾಜದ ಸತ್ಪ್ರಜೆ ಗಳನ್ನಾಗಿ ಮಾಡಬೇಕು ಎಂದರು.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಸಮಾಜದಲ್ಲಿ ಬಾಲ ಕಾರ್ಮಿಕರು, ಕಿಶೋರ ಕಾರ್ಮಿಕರು, ಕಂಡು ಬಂದಲ್ಲಿ ಅವರ ರಕ್ಷಣೆಗೆ ಮುಂದಾಗಬೇಕು. ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಂಡವರು ಮತ್ತು ಮಕ್ಕಳ ಪೋಷಕರಿಗೆ ಅಗತ್ಯ ತಿಳುವಳಿಕೆ ನೀಡಿ ಮಕ್ಕಳನ್ನು ರಕ್ಷಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮವನ್ನು ಮೊದಲು ತಾಲೂಕು ಪಂಚಾಯಿತಿ ಆವರಣದಿಂದ ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆಯವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾದ ಶುಭ ಗೌಡರ್ ಹಸಿರು ನಿಶಾನೆ ತೋರಿಸಿದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿ ಹಾಗೂ ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್. ರವಿಕುಮಾರ್, ವಕೀಲರ ಸಂಘ ಅಧ್ಯಕ್ಷ ಡಿ.ಬಿ. ಸುಜೇಂದ್ರ, ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಗೀತಾ ಎಂ.ಎಲ್. ಮೂರ್ತಿ ಹಾಗೂ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಹಾಜರಿದ್ದರು. 12 ಕೆಸಿಕೆಎಂ 8ಚಿಕ್ಕಮಗಳೂರಿನ ರೋಟರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ವಿ. ಹನುಮಂತಪ್ಪ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಸಿಇಒ ಡಾ. ಗೋಪಾಲಕೃಷ್ಣ, ರಾಜಾನಾಯ್ಕ, ಗೀತಾ ಎಂ.ಎಲ್. ಮೂರ್ತಿ ಇದ್ದರು.