ಬಾಲಕಾರ್ಮಿಕ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ: ಚಂದ್ರಶೇಖರ ದಿಡ್ಡಿ

KannadaprabhaNewsNetwork |  
Published : Jun 13, 2025, 04:33 AM IST
(ಫೋಟೋ 12ಬಿಕೆಟಿ3, ವಿಶ್ವ ಬಾಲ ಕಾರ್ಮಿಕಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ) | Kannada Prabha

ಸಾರಾಂಶ

ವಿವಿಧ ಕಾರಣಗಳಿಂದ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ, ಶಿಕ್ಷಣ ನೀಡಿದಾಗ ಮಾತ್ರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಿವಿಧ ಕಾರಣಗಳಿಂದ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ, ಶಿಕ್ಷಣ ನೀಡಿದಾಗ ಮಾತ್ರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 14 ವರ್ಷದೊಳಗಿನ ಮಕ್ಕಳನ್ನು ಅವರ ಶಿಕ್ಷಣ ಹಕ್ಕಿನಿಂದ ವಂಚಿಸಿ, ದುಡಿಮೆಗೆ ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷತೆ ವಹಿಸಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿದ ಮಾತ್ರಕ್ಕೆ ಕರ್ತವ್ಯ ಮುಗಿಯದು. 2-3 ವರ್ಷಗಳವರೆಗೆ ನಿಗಾ ವಹಿಸಬೇಕು. ಶಿಕ್ಷಣವೇ ಜೀವನ ಬದಲಾವಣೆಗೆ ಏಕೈಕ ಮಾರ್ಗ. ನಮ್ಮ ಸುತ್ತಮುತ್ತ ಎಲ್ಲಿಯಾದರೂ ಬಾಲಕಾರ್ಮಿಕರು ಕಂಡುಬಂದಲ್ಲಿ ಕಾರ್ಮಿಕ ಇಲಾಖೆಯ 1098 ಸಹಾಯವಾಣಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡುವುದು ಸಹ ನಿಮ್ಮ ಜವಾಬ್ದಾರಿ ಎಂದರು.

ಇಂತಹ ದುಷ್ಟ, ಅಮಾನವೀಯ ಪದ್ಧತಿಗೆ ತೀಲಾಂಜಲಿ ಇಡಬೇಕಿದೆ. ಬಾಲ್ಯವನ್ನು ಕದಿಯುವ, ಕಸಿಯುವ ಹಕ್ಕು ಯಾರಿಗೂ ಇಲ್ಲ. ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವ ಅಧಿಕಾರಿಗಳ ಪ್ರಯತ್ನಕ್ಕೆ ಸಾರ್ವಜನಿಕರು ಸಹ ನೆರವಾಗಬೇಕು. ಅಂದಾಗ ಮಾತ್ರ ಬಾಲ ಕಾರ್ಮಿಕರನ್ನು ಗುರುತಿಸಿ, ಶಿಕ್ಷಣ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ. ಬಾಲ ಕಾರ್ಮಿಕನಾಗಿದ್ದ ಬಸವರಾಜ ಲಮಾಣಿ ಬಾಲ ಕಾರ್ಮಿಕ ವಿಶೇಷ ಶಾಲೆಯಲ್ಲಿ ವ್ಯಾಸಂಗ ಮಾಡಿ ಜ್ಯೂನಿಯರ್ ಎಂಜಿನಿಯರ್ ಆಗಿರುವುದು ಬೇರೆಯವರಿಗೆ ಸ್ಫೂರ್ತಿಯಾಗಲಿದೆ ಎಂದು ಹೇಳಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಹನಮಂತಗೌಡ ಪಾಟೀಲ ಮಾತನಾಡಿದರು. ವಕೀಲರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಉಪ ಕಾನೂನು ನೆರವು ಅಭೀರಕ್ಷಕ ಪ್ರಶಾಂತ ನಾರಾಯಣಕರ ಬಾಲ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ ಕಾಯ್ದೆ 2016 ಕುರಿತು ಉಪನ್ಯಾಸ ನೀಡಿದರು. ಬಾಲ ಕಾರ್ಮಿಕರಾಗಿದ್ದ ಬಸವರಾಜ ಲಮಾಣಿ ಎಂಜಿನಿಯರ್‌ ಅನುಭವವನ್ನು ಹಂಚಿಕೊಂಡರು. ಬಾಲ ಕಾರ್ಮಿಕತೆಯಿಂದ ಮುಕ್ತಿಹೊಂದಿ ಮುಖ್ಯವಾಹಿನಿ ಶಾಲೆಗೆ ಸೇರಿದ ಮಕ್ಕಳಿಗೆ ಪ್ರಶಂಸಣಾ ಪತ್ರ ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಮೇಶ ಬದ್ನೂರ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ, ಕಾರ್ಮಿಕ ನಿರೀಕ್ಷಕ ರಾಜಶೇಖರ ಕರಡಿಕೇರಿ ಸೇರದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮ ಪೂರ್ವದಲ್ಲಿ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ