ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಮಸಾಲ, ಹಪ್ಪಳ, ಉಪ್ಪಿನಕಾಯಿ ಹಾಗೂ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಬ್ರಹ್ಮಾವರ: ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಮಸಾಲ, ಹಪ್ಪಳ, ಉಪ್ಪಿನಕಾಯಿ ಹಾಗೂ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಕೋಟೇಶ್ವರದ ಚಂದು ಮಸಾಲ ಉದ್ಯಮದ ಮಾಲೀಕ ಮಂಜುನಾಥ್ ನಾಯಕ್ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು. ಉದ್ಯಮದಲ್ಲಿ ಯಶಸ್ಸು ಸಾಧಿಸಲು ಆಸಕ್ತಿ, ಗುಣಮಟ್ಟ ಹಾಗೂ ನಿರಂತರ ಪ್ರಯತ್ನ ಮುಖ್ಯ ಎಂದು ಹೇಳಿದರು. ತಮ್ಮ ಸ್ವಂತ ಉದ್ಯಮದ ಅನುಭವ ಹಂಚಿಕೊಂಡ ಅವರು, ಆಹಾರ ಉದ್ಯಮದಲ್ಲಿ ತ್ವರಿತ ಯಶಸ್ಸಿಗಾಗಿ ಯಾವುದೇ ಕಾರಣಕ್ಕೂ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬಾರದು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಹೇಳಿದರು. ಉದ್ಯಮದಲ್ಲಿ ಏಳು-ಬೀಳುಗಳು ಸಹಜ. ಅವುಗಳಿಂದ ಹಿಂಜರಿಯದೆ ನಿರಂತರವಾಗಿ ಪ್ರಯತ್ನಿಸುತ್ತಾ ಮುನ್ನಡೆಯಬೇಕು. “ಪ್ರಯತ್ನವೇ ಯಶಸ್ಸಿನ ಕೀಲಿ ಕೈ” ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಮಾತನಾಡಿ, ಉದ್ಯಮದಲ್ಲಿ 12 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಉದ್ಯಮಿಗಳಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಮುಂದಿನ ಹೆಜ್ಜೆಗಳನ್ನು ಜಾಗರೂಕತೆಯಿಂದ ಇಡಬೇಕು ಎಂದು ಹೇಳಿದರು. ತರಬೇತಿ ಸಂದರ್ಭ ಪಡೆದ ಅನುಭವ ಹಾಗೂ ಜ್ಞಾನವನ್ನು ತಮ್ಮ ಕುಟುಂಬದವರು, ಸ್ನೇಹಿತರು ಹಾಗೂ ಇತರರೊಂದಿಗೆ ಹಂಚಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಕರೆ ನೀಡಿ, ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭ ಸಂಸ್ಥೆಯ ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿದರು. ಹಿರಿಯ ಉಪನ್ಯಾಸಕ ಸಂತೋಷ್ ಸ್ವಾಗತಿಸಿದರು. ಹಿರಿಯ ಕಚೇರಿ ಸಹಾಯಕ ರವಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.