ಒಪಿಎಸ್ ಜಾರಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ: ಮೋಹನ್ ಲಿಂಬಿಕಾಯಿ

KannadaprabhaNewsNetwork |  
Published : Sep 09, 2026, 02:15 AM IST
ಸುದ್ದಿಗೋಷ್ಠಿಯಲ್ಲಿ ಮೋಹನ್ ಲಿಂಬಿಕಾಯಿ ಮಾತನಾಡಿದರು. | Kannada Prabha

ಸಾರಾಂಶ

ಶಾಸಕ ಸತೀಶ್ ಸೈಲ್ ಅವರ ಮಾರ್ಗದರ್ಶನದಲ್ಲಿ ಕಾರವಾರ- ಅಂಕೋಲಾ ಸೇರಿದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಲಾಗುತ್ತಿದೆ ಎಂದು ಮೋಹನ್ ಲಿಂಬಿಕಾಯಿ ತಿಳಿಸಿದರು.

ಕಾರವಾರ: ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ, ಸರ್ಕಾರಿ ಹಾಗೂ ಅನುದಾನಿತ ನೌಕರರಿಗೆ ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿ ಸೇರಿದಂತೆ ಶಿಕ್ಷಕರು ಮತ್ತು ನೌಕರರ ಪ್ರಮುಖ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ಸ್ಪಂದಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ವಿಧಾನಪರಿಷತ್ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಹಾಗೂ ಮಾಜಿ ಎಂಎಲ್‌ಸಿ ಮೋಹನ್ ಲಿಂಬಿಕಾಯಿ ಭರವಸೆ ನೀಡಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆರು ತಿಂಗಳ ಮುಂಚಿತವಾಗಿಯೇ ತಮ್ಮನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಶಾಸಕ ಸತೀಶ್ ಸೈಲ್ ಅವರ ಮಾರ್ಗದರ್ಶನದಲ್ಲಿ ಕಾರವಾರ- ಅಂಕೋಲಾ ಸೇರಿದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಲಾಗುತ್ತಿದೆ ಎಂದರು.ಕಾರವಾರ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ 34 ತಾಲೂಕುಗಳ 88,887 ಪದವೀಧರ ಮತದಾರರನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ 24 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 17 ಕಾಂಗ್ರೆಸ್ ಶಾಸಕರಿದ್ದು, ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಬೆಂಬಲವೂ ಇದೆ. ಹೀಗಾಗಿ ಒಟ್ಟು 18 ಶಾಸಕರ ಬೆಂಬಲದೊಂದಿಗೆ ಕಾಂಗ್ರೆಸ್ ಚುನಾವಣೆಗೆ ಸಿದ್ಧವಾಗಿದ್ದು, ಗೆಲುವಿನ ವಿಶ್ವಾಸವಿದೆ ಎಂದು ಲಿಂಬಿಕಾಯಿ ಹೇಳಿದರು.ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ನೀಡಲಾಗುತ್ತಿರುವ 14 ಸಾವಿರ ಗೌರವಧನವನ್ನು ಹೆಚ್ಚಿಸುವಂತೆ ಸರ್ಕಾರದ ಗಮನ ಸೆಳೆಯಲಾಗುವುದು. ಒಪಿಎಸ್- ಎನ್‌ಪಿಎಸ್ ಗೊಂದಲ ನಿವಾರಣೆಗೆ ತಜ್ಞರ ಸಮಿತಿ ರಚಿಸಲಾಗಿದ್ದು, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಒಪಿಎಸ್ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಕಲ್ಗುಟ್ಕರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜೇಂದ್ರ ನಾಯ್ಕ, ವಕ್ತಾರ ಶಂಭು ಶೆಟ್ಟಿ, ತಾಲೂಕು ಅಧ್ಯಕ್ಷ ದಿಲೀಪ್ ರಾಣೆ, ಪ್ರಚಾರ ಸಮಿತಿ ಅಧ್ಯಕ್ಷ ಜಿ.ಪಿ. ನಾಯಕ, ನಿವೃತ್ತ ಪ್ರಾಂಶುಪಾಲ ಲಿಂಗರಾಜ್ ಅಂಗಡಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಾಬು ಶೇಖ್, ಉದಯ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಸತಿ ಶಾಲೆಯಲ್ಲಿ ಆರೋಗ್ಯ ಇಲಾಖೆ ತಂಡದಿಂದ ವಿದ್ಯಾರ್ಥಿಗಳ ತಪಾಸಣೆ
ಹಲವು ಸವಾಲುಗಳನ್ನೆದುರಿಸಿ ಶಿಕ್ಷಕರು ವೃತ್ತಿ ಗೌರವ ಕಾಪಾಡಿಕೊಳ್ಳಬೇಕಾಗಿದೆ