ಹಾವೇರಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಅಗತ್ಯ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದೆ. ಖಾಸಗಿ ಶಾಲೆಗಳಿಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಮಾತನಾಡಿ, ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಗತ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದರು.ದೇವಗಿರಿ ಗ್ರಾಮದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಹಕಾರದೊಂದಿಗೆ ಗ್ರಾಮಸ್ಥರು ಸಹಾಯಧನ ನೀಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ದೇವಗಿರಿ ಗ್ರಾಮವು ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ನವೀಕರಣ ಹಾಗೂ ಸಾರ್ವಜನಿಕ ಸಹಕಾರದೊಂದಿಗೆ ಕೊಠಡಿಗಳ ನಿರ್ಮಾಣಕ್ಕೆ ಶ್ರಮಿಸಿದ ದೇವಗಿರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನಿತಾ ಗರಡಿ ಅವರನ್ನು ಸಚಿವ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣನವರ ಹಾಗೂ ಹಿರಿಯ ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.