ಕಲ್ಪತರು ನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರದೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ನಗರದ ವಿವಿಧ ಬಡಾವಣೆಗಳಲ್ಲಿರುವ ಹಾಗೂ ಜಿಲ್ಲೆಯ ವಿವಿಧೆಡೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಕನ್ನಡಪ್ರಭ ವಾರ್ತೆ, ತುಮಕೂರು
ಕಲ್ಪತರು ನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರದೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ನಗರದ ವಿವಿಧ ಬಡಾವಣೆಗಳಲ್ಲಿರುವ ಹಾಗೂ ಜಿಲ್ಲೆಯ ವಿವಿಧೆಡೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಜಿಲ್ಲೆಯಾದ್ಯಂತ ಇರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯ, ಶ್ರೀ ರಂಗನಾಥಸ್ವಾಮಿ ದೇವಾಲಯ, ಶ್ರೀ ವಿಷ್ಣು ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರವನ್ನು ಮಾಡಲಾಗಿತ್ತು. ಇಲ್ಲಿನ ಬಟವಾಡಿಯ ವೆಂಕಟೇಶ್ವರ ಸ್ವಾಮಿ ದೇವಾಲಯ, ಸಿರಾಗೇಟ್ ಸಮೀಪವಿರುವ ಶ್ರೀ ವೆಂಕಟೇಶ್ವಸ್ವಾಮಿ ದೇವಾಲಯ, ಜಯನಗರ ರಿಂಗ್ ರಸ್ತೆಯ ತಿರುಮಲ ನಗರ ದಕ್ಷಿಣದ ಕೆ.ಎಚ್.ಬಿ. ಕಾಲೋನಿಯಲ್ಲಿರುವ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ, ಸರಸ್ವತಿ ಪುರಂನ ವೆಂಕಟೇಶ್ವರ ಸ್ವಾಮಿ ದೇಗುಲ, ಜಯನಗರ ಪಶ್ಚಿಮದ ಪದ್ಮಾವತಿ ವೆಂಕಟೇಶ್ವರಸ್ವಾಮಿ ದೇವಾಲಯ, ಟಿಜಿಎಂಸಿ ಬ್ಯಾಂಕ್ ಮುಂಭಾಗದ ಮಹಾಲಕ್ಷ್ಮೀ ದೇವಾಲಯ, ಸೋಮೇಶ್ವರಪುರಂನ ಗೋಪಾಲಕೃಷ್ಣ ದೇವಾಲಯ, ಶಾಂತಿನಗರದ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯ, ತುರುವೇಕೆರೆ ತಾಲೂಕಿನ ಮುದುಗೆರೆ ಸಮೀಪದ ಶ್ರೀ ಕೋಡಿ ರಂಗನಾಥಸ್ವಾಮಿ ದೇವಾಲಯ, ಸಂಪಿಗೆಯ ವೆಂಕಟೇಶ್ವರ ಸ್ವಾಮಿ ದೇವಾಲಯ ಹಾಗೂ ಗುಬ್ಬಿಯ ಬೇಟೆರಾಯಸ್ವಾಮಿ ದೇವಾಲಯ, ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಮುಂಜಾನೆಯಿಂದಲೇ ಭಕ್ತಾದಿಗಳು ವೆಂಕಟೇಶ್ವರ ಸ್ವಾಮಿ ದೇವಾಲಯಗಳಿಗೆ ತೆರಳಿ ಸರದಿಯ ಸಾಲಿನಲ್ಲಿ ನಿಂತು ವೈಕುಂಠ ದರ್ಶನದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಸಿರಾಗೇಟ್ ಸಮೀಪದ ವೆಂಕಟೇಶಪುರದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ವೈಕುಂಠ ದರ್ಶನ ಪಡೆದರು. ವೈಕುಂಠ ಏಕಾದಶಿ ಅಂಗವಾಗಿ ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ಉಯ್ಯಾಲೆ ಸೇವೆ, ಪ್ರಕಾರೋತ್ಸವಗಳು ನೆರವೇರಿದವು.
ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಹಾಗೆಯೇ ದೇವರ ಮೂರ್ತಿಗಳಿಗೂ ವೈಭವೋಪೇತ ಅಲಂಕಾರ ಮಾಡಲಾಗಿತ್ತು. ಭಕ್ತರ ದರ್ಶನಕ್ಕಾಗಿ ಯಾವುದೇ ರೀತಿಯ ತೊಂದರೆಗಳಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಎಲ್ಲ ದೇವಾಲಯಗಳಲ್ಲೂ ಭಕ್ತಾದಿಗಳಿಗೆ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ವೆಂಕಟೇಶ್ವರನ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಗೋವಿಂದನ ನಾಮಸ್ಮರಣೆ ಮೊಳಗಿದವು. ನಗರದ ವಿವಿಧ ಬಡಾವಣೆಗಳಲ್ಲಿರುವ ವೆಂಕಟೇಶ್ವರಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾದಿಗಳು ನೆರವೇರಿದ್ದು, ಭಕ್ತರಿಗೆ ವೈಕುಂಠ ಏಕಾದಶಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.