ಚುನಾವಣೆ ಬಂತು ಮೋದಿ ಬಂದ್ರು ನೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

KannadaprabhaNewsNetwork |  
Published : Apr 03, 2024, 01:38 AM IST
11 | Kannada Prabha

ಸಾರಾಂಶ

10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್

ಕನ್ನಡಪ್ರಭ ವಾರ್ತೆ ಮೈಸೂರು

ನಮ್ಮ ನಾಡಿಗೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ, ಮೋದಿ ರಾಜ್ಯಕ್ಕೆ ಬಂದ್ರು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇಗೌಡನಕೊಪ್ಪಲಿನಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೋದಿಯವರು ಈ ಹತ್ತು ವರ್ಷದಲ್ಲಿ ಸುಳ್ಳು ಹೇಳಿ ಭಾರತೀಯರನ್ನು ಮರಳು ಮಾಡಿದ್ದು ಬಿಟ್ಟರೆ, ಭಾರತೀಯರ ಬದುಕು ಸುಧಾರಿಸುವ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲಿಲ್ಲ ಏಕೆ ಎಂದು ಪ್ರಶ್ನಿಸಿದರು.

10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್ ಎಂದು ಅವರು ವ್ಯಂಗ್ಯವಾಡಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಕ್ಕಿ, ಬೇಳೆ, ಎಣ್ಣೆ ಯಾವುದರ ಬೆಲೆಯೂ ಕಡಿಮೆ ಆಗಲಿಲ್ಲ. ಮೋದಿ ಪ್ರಕಾರ ಇದೇ ಅಚ್ಛೆ ದಿನ ಇರಬಹುದು. ಆದರೆ, ನಿಜವಾದ ಅಚ್ಛೆ ದಿನ್ ನಿಮ್ಮಗಳಿಗೆ ಯಾರಿಗಾದರೂ, ಒಬ್ಬರಿಗಾದರೂ ಬಂದಿದೆಯಾ ಎಂದು ಅವರು ಪ್ರಶ್ನಿಸಿದರು.

ದೇವೇಗೌಡರ ಬಗ್ಗೆ ವೈಯಕ್ತಿಕ ವಿರೋಧ ಇಲ್ಲ

ಎಚ್.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು. ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡರನ್ನು ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.

ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ, ಪ್ರಬುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ.

- ಸಿದ್ದರಾಮಯ್ಯ, ಮುಖ್ಯಮಂತ್ರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಜಾಗೊಳಿಸಿದ್ದ ಗುತ್ತಿಗೆ ಕಾರ್ಮಿಕರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳುವ ಕುರಿತು ಒಪ್ಪಂದ
ಸರ್ಕಾರಿ ಭೂಮಿ ಒತ್ತುವರಿ ಶೀಘ್ರದಲ್ಲೇ ತೆರವು: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ