ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ಉಸ್ತುವಾರಿ ಚಿನಕರುಳಿ ರಮೇಶ್ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಚಿನಕುರುಳಿ ರಮೇಶ್, ಮತಗಳ್ಳತನದ ಮೂಲಕ ಬಿಜೆಪಿ ನೆರೆಯ ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿದಿದೆ. ಇದೀಗ ಬಿಹಾರದ ಚುನಾವಣೆಯಲ್ಲಿ ಮತಗಳ್ಳತನದ ಪ್ರಯತ್ನ ನಡೆಸಲು ಹೊಂಚು ಹಾಕಿದೆ ಎಂದು ಕಿಡಿಕಾರಿದರು.ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಪಕ್ಷದ ಪರ ಕೆಲಸ ಮಾಡುತ್ತಿದೆ. ಮತ ಪರಿಷ್ಕರಣೆಯ ಹೆಸರಿನಲ್ಲಿ ಅಲ್ಪ ಸಂಖ್ಯಾತರ ಹೆಸರುಗಳನ್ನು ಮತಪಟ್ಟಿಯಿಂದ ಕೈಬಿಡುತ್ತಿದೆ. ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದ್ದರೆ ದೇಶದಲ್ಲಿ ಇಂದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುತ್ತಿತ್ತು ಎಂದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್, ಬಿ.ಕೆ.ರವೀಂದ್ರನಾಥ್, ಮುಖಂಡರಾದ ಮಡುವಿನಕೋಡಿ ಕಾಂತರಾಜು, ಸಚಿವ ಎನ್.ಚಲುವರಾಯಸ್ವಾಮಿ ಅವರ ಆಪ್ತ ಸಹಾಯಕ ಚೇತನ ಮಹೇಶ್, ಪುರಸಭಾ ಸದಸ್ಯ ಡಿ.ಪ್ರೇಂಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಮಹಿಳಾ ಮುಖಂಡರುಗಳಾದ ಶಿವಮ್ಮ, ಪ್ರತಿಮ, ಲೋಲಾಕ್ಷಿ, ಲತಾ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.