ಜಿಲ್ಲಾ ಉಸ್ತುವಾರಿ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ್‌ರ ಶಿಫಾರಸ್ಸು ಪತ್ರದ ಮೇಲೆ ಇಲ್ಲಿಗೆ ಬಂದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ವರ್ಗಾವಣೆ ಮಾಡುವಂತೆ ಜಿಲ್ಲಾ, ರಾಜ್ಯ ಚುನಾವಣಾಧಿಕಾರಿಗಳು ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ.ದಾಸಕರಿಯಪ್ಪ ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ದಾವಣಗೆರೆ
ಜಿಲ್ಲಾ ಉಸ್ತುವಾರಿ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ್‌ರ ಶಿಫಾರಸ್ಸು ಪತ್ರದ ಮೇಲೆ ಇಲ್ಲಿಗೆ ಬಂದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ವರ್ಗಾವಣೆ ಮಾಡುವಂತೆ ಜಿಲ್ಲಾ, ರಾಜ್ಯ ಚುನಾವಣಾಧಿಕಾರಿಗಳು ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ.ದಾಸಕರಿಯಪ್ಪ ಒತ್ತಾಯಿಸಿದರು.
ನಗರದ ಮಟ್ಟಿಕಲ್ಲು, ಬಸಾಪುರ, ಗ್ರಾಮಗಳಲ್ಲಿ ಬುಧವಾರ ಬೈಕ್‌ನಲ್ಲಿ ಸಾಗುತ್ತಾ ಮತಯಾಚಿಸುತ್ತಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮೇಲೆ ಇಂತಹ ಅಧಿಕಾರಿಗಳು ಪ್ರಭಾವ ಬೀರುವ ಸಾಧ್ಯತೆ ಇದೆ. ಹಾಗಾಗಿ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ್‌ರ ಶಿಫಾರಸ್ಸು ಪತ್ರದ ಮೇಲೆ ಬಂದ ಎಲ್ಲಾ ಅಧಿಕಾರಿಗಳನ್ನು ತಕ್ಷಣವೇ ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದರು.
ಚುನಾವಣಾಧಿಕಾರಿ, ತಹಸೀಲ್ದಾರ್ ವರ್ಗಾವಣೆ ಮಾಡಿ:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷಕುಮಾರ, ದಾವಣಗೆರೆ ತಹಸೀಲ್ದಾರ್ ಡಾ.ಎಂ.ಬಿ.ಅಶ್ವತ್ಥ್ ಅಧಿಕಾರ ದುರುಪಯೋಗಪಡಿಸಿಕೊಂಡ ಬಗ್ಗೆ ಜಿಲ್ಲಾ ಮತ್ತು ರಾಜ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ, ಹಿರಿಯ ವಕೀಲ ಎ.ಸಿ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾ.17ರಂದು ಸಂಜೆ 5.30ರಿಂದ 6.30ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಅದನ್ನು ಉಲ್ಲಂಘಿಸಿ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷಕುಮಾರ ತಮ್ಮ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಕಾಂಗ್ರೆಸ್ಸಿನ ಕೆಲ ಮುಖಂಡರೊಂದಿಗೆ ಸಭೆ ನಡೆಸಿದ್ದು, ಕಚೇರಿಯಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದರು.
ಈಗಾಗಲೇ ಬಿಜೆಪಿಯಿಂದ ಸಿಸಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಕೇಳಿದ್ದೇವೆ. ನೀತಿ ಸಂಹಿತೆ ಜಾರಿಯಾಗಿ, ಚುನಾವಣಾಧಿಕಾರಿಯಾಗಿ ಘೋಷಣೆಯಾದ ನಂತರ ಉಪ ವಿಭಾಗಾಧಿಕಾರಿ ಕೆಲಸವನ್ನು ಸಂತೋಷಕುಮಾರ ನಿರ್ವಹಿಸುವಂತಿಲ್ಲ. ಆದರೂ, ಮಾ.17ರಂದು ಸಂಜೆ ಕಾಂಗ್ರೆಸ್ ಮುಖಂಡರೊಂದಿಗೆ ತಮ್ಮ ಕಚೇರಿಯ ಬಾಗಿಲನ್ನು ಹಾಕಿಕೊಂಡು, ಸಭೆ ನಡೆಸಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗದಿದ್ದರೂ ದಾವಣಗೆರೆ ತಹಸೀಲ್ದಾರ್ ಡಾ.ಎಂ.ಬಿ.ಅಶ್ವತ್ಥ್ ಆಗಾಗ ಚುನಾವಣಾಧಿಕಾರಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿ, ಸಲಹೆ ನೀಡಿರುವುದು ಸಹ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ದಾವಣಗೆರೆ ಉಪ ವಿಭಾಗಾಧಿಕಾರಿ, ಕ್ಷೇತ್ರದ ಚುನಾವಣಾಧಿಕಾರಿಯಾದಿ ಸಂತೋಷಕುಮಾರ ಹಾಗೂ ತಹಸೀಲ್ದಾರ್ ಡಾ.ಅಶ್ವತ್ಥ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಇಲ್ಲಿಂದ ತಕ್ಷಣ ವರ್ಗಾವಣೆ ಮಾಡುವಂತೆ ಎಲ್ಲಾ ದಾಖಲೆ ಸಮೇತ ಜಿಲ್ಲಾ, ರಾಜ್ಯ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದೇವೆ ಎಂದರು.
ಮಾ.20ರಂದು ಶುಕ್ರವಾರ ನಾಮಪತ್ರ ಸಲ್ಲಿಕೆ ವೇಳೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ ಕಾರಿನಲ್ಲಿ ನೇರವಾಗಿ ಪಾಲಿಕೆ ಆವರಣ ಚುನಾವಣಾಧಿಕಾರಿ ಕಚೇರಿವರೆಗೆ ತೆರಳಿರುವುದು ಸಹ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಹ ನೇರವಾಗಿ ಚುನಾವಣಾಧಿಕಾರಿಗಳ ಕಚೇರಿ ಆವರಣದವರೆಗೆ ಕಾರಿನಲ್ಲೇ ತೆರಳಿದ್ದು, ನೀತಿ ಸಂಹಿತೆ ಪ್ರಕಾರ ಯಾವುದೇ ವಾಹನಗಳನ್ನು ಚುನಾವಣಾಧಿಕಾರಿಗಳ ಕಚೇರಿಯಿಂದ 200 ಮೀಟರ್ ಹೊರಗೆ ನಿಲ್ಲಿಸಬೇಕು. ಈ ಬಗ್ಗೆಯೂ ಜಿಲ್ಲಾ ಮತ್ತು ರಾಜ್ಯ ಚುನಾವಣಾಧಿಕಾರಿ ಹಾಗೂ ಆಯೋಗದ ಗಮನಕ್ಕೆ ತರಲಿದ್ದೇವೆ ಎಂದು ವಕೀಲ ಎ.ಸಿ.ರಾಘವೇಂದ್ರ, ಎಚ್.ದಿವಾಕರ ತಿಳಿಸಿದರು.
ಮಾಜಿ ಮೇಯರ್ ಎಸ್.ಟಿ.ವೀರೇಶ ಮಾತನಾಡಿ, ಜಿಲ್ಲೆಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು, ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಮಾ.20ರಂದು ನಾಮಪತ್ರ ಸಲ್ಲಿಸಲು ಪಾಲಿಕೆ ಆವರಣದ ಚುನಾವಣಾಧಿಕಾರಿ ಕಚೇರಿ ಬಳಿಗೆ ಬಂದಿದ್ದ ಸಂಸದಲ ವಾಹನ ಬಂದಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದರು.
ಪೊಲೀಸ್ ಅಧಿಕಾರಿಗಳಿಂದ ಕಿರುಕುಳ, ಆರೋಪ
ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ಅಧಿಕಾರಿಗಳು ಫೋನ್ ಮಾಡಿ, ಬೆದರಿಕೆ ಹಾಕುತ್ತಿದ್ದಾರೆ. 107, 108ನಡಿ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಯಾರೆಂಬುದು ನಮಗೆ ಗೊತ್ತಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಆಯೋಗದ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ. ಯಾವುದೇ ಅತಿರೇಕಕ್ಕೆ ಹೋಗಬಾರದು. ಇಲ್ಲಿ ಒಂದು ಪಕ್ಷ, ಅಭ್ಯರ್ಥಿ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಎ.ಸಿ.ರಾಘವೇಂದ್ರ ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.