ಚುನಾವಣಾ ಅಧಿಕಾರಿಗಳು, ಸಿಬ್ಬಂದಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ಡೀಸಿ

KannadaprabhaNewsNetwork | Published : Mar 2, 2024 1:46 AM

ಸಾರಾಂಶ

ಎಫ್ಎಸ್, ಎಸ್ಎಸ್ ಟಿ, ವಿಎಸ್ ಟಿ, ವಿವಿಟಿ ತಂಡ ಹಾಗೂ ಪೊಲೀಸ್ ಸೆಕ್ಟರ್ ಗಳಿಗೆ ನಿಯೋಜನೆಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ಪಾಲಿಸಬೇಕು. ಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗಧಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇರಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ದೇವರಾಜು ಅರಸು ಸಭಾಂಗಣದಲ್ಲಿ ಶುಕ್ರವಾರ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆ- 2024ರ ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ವಿವಿಧ ಹಂತದ ಅಧಿಕಾರಿಗಳಿಗೆ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ಅವರು ಮಾತನಾಡಿದರು.

ಎಫ್ಎಸ್, ಎಸ್ಎಸ್ ಟಿ, ವಿಎಸ್ ಟಿ, ವಿವಿಟಿ ತಂಡ ಹಾಗೂ ಪೊಲೀಸ್ ಸೆಕ್ಟರ್ ಗಳಿಗೆ ನಿಯೋಜನೆಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ಪಾಲಿಸಬೇಕು. ಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗಧಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇರಿಸಬೇಕು ಎಂದು ಅವರು ಸೂಚಿಸಿದರು.

ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲಾ ತಂಡಗಳೂ ಹೆಚ್ಚು ಗಮನ ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ದಾಖಲಿಸಿ ಇಟ್ಟುಕೊಂಡು ಕಾಲಕಾಲಕ್ಕೆ ಈ ಕುರಿತು ವರದಿಯನ್ನು ಕಳುಹಿಸಬೇಕು ಎಂದರು.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಎಂಸಿಸಿ ತಂಡಗಳು ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್‍ ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಇನ್ನೂ ಜಾಗೃತರಾಗಿ ಕಾರ್ಯ ನಿರ್ವಹಿಸಬೇಕು. ಒಟ್ಟಾರೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ತಮ್ಮ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕಿದೆ. ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳಿಗೆ ನಿಗದಿಯಾಗುವ ಚುನಾವಣಾ ವೆಚ್ಚದ ಕುರಿತು ಸರಿಯಾದ ಲೆಕ್ಕಪತ್ರಗಳು ಇರಬೇಕು. ಈ ಸಂಬಂಧ ಯಾವುದೇ ಗೊಂದಲಕ್ಕೆ ಒಳಗಾಗದೇ ಎಲ್ಲಾ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಚುನಾವಣೆ ಘೋಷಣೆಯಾದ ತಕ್ಷಣ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್ , ಫ್ಲೆಕ್ಸ್ ಹಾಗೂ ವಿವಿಧ ಇಲಾಖೆಗಳ ವೆಬ್ ಸೈಟ್ ಗಳನ್ನು ಪಟ್ಟಿ ಮಾಡಿಕೊಂಡು ವೆಬ್ ಸೈಟ್ ಗಳಲ್ಲಿರುವ ಸಚಿವರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು‌.

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಕಲಚೇತನರು, ಅಶಕ್ತರು ಪ್ರವೇಶಿಸಲು ಅನುಕೂಲವಾಗುವಂತೆ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಈ ಹಿಂದೆ ಯಾವ ಮತಗಟ್ಟೆ ಕಟ್ಟಡಗಳಲ್ಲಿ ಸೌಲಭ್ಯ ಇದೆ. ಯಾವ ಕಟ್ಟಡಗಳಲ್ಲಿ ಇಲ್ಲ ಎಂಬ ಬಗ್ಗೆ ಪಟ್ಟಿ ಮಾಡಿ ಮೂಲಸೌಕರ್ಯ ಕಲ್ಪಿಸಬೇಕು. ಆ ಪ್ರಕಾರ ಶೌಚಾಲಯ, ರಾರಯಂಟಪ್‌ನಿರ್ಮಾಣ ಮಾಡಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಚೆಕ್‌ ಪೋಸ್ಟ್‌ಸ್ಥಾಪನೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಈಗಲೇ ಕಾರ್ಯಪ್ರವೃತ್ತವಾಗಬೇಕು ಹಾಗೂ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಎಂಡಿಎ ಆಯುಕ್ತ ದಿನೇಶ್ ಕುಮಾರ್, ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಯ ಆಯುಕ್ತ ದೇವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಚುನಾವಣೆ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ಇಡೀ ತಂಡವಾಗಿ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸಿದರೆ ಯಶಸ್ವಿಯಾಗಲು ಸಾಧ್ಯವಾಗಲಿದೆ. ಹೀಗಾಗಿ, ಪ್ರತಿಯೊಬ್ಬರೂ ನಿಯೋಜಿಸಿದ ಕರ್ತವ್ಯವನ್ನು ಯಾವುದೇ ಲೋಪ ಇಲ್ಲದೆ ನಿರ್ವಹಿಸಬೇಕು.

- ಕೆ.ಎಂ. ಗಾಯತ್ರಿ, ಜಿಪಂ ಸಿಇಒ

Share this article