ಕನ್ನಡಪ್ರಭ ವಾರ್ತೆ ಶಿವಮೊಗ್ಗ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜ.12ರಂದು ಚಾಲನೆ ನೀಡಲಿದ್ದಾರೆ. 2022-23ನೇ ಸಾಲಿನಲ್ಲಿ ಉತ್ತೀರ್ಣ ಆಗಿರುವ ಹಾಗೂ ಈ ಯೋಜನೆಯಡಿ ಸೌಲಭ್ಯ ಹೊಂದಲು ಅರ್ಹರಿರುವ ಎಲ್ಲ ವಿದ್ಯಾರ್ಥಿಗಳನ್ನು ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪ್ರಾಚಾರ್ಯರೊಂದಿಗೆ ಯುವನಿಧಿ ಗ್ಯಾರಂಟಿ ಯೋಜನೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಜ.12ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯುವನಿಧಿಗೆ ಚಾಲನೆ ನೀಡಲಿದ್ದಾರೆ ಎಂದರು.ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಯ ಸುಮಾರು 1ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ. ಶಿಕ್ಷಣ ಮತ್ತು ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಂದ ಅಗತ್ಯ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ಇಲಾಖೆಯ ಉನ್ನತಿಗೆ ಅಗತ್ಯವಿರುವ ಎಲ್ಲ ಸಲಹೆ-ಸೂಚನೆಗಳನ್ನು ಸ್ವೀಕರಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರೇರೇಪಿಸುವುದರೊಂದಿಗೆ, ಸಕಾಲದಲ್ಲಿ ಆಗಮಿಸುವಂತೆ ಮಾಹಿತಿ ನೀಡಲು ಸೂಚಿಸಿದರು.ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಸೇರಿದಂತೆ ಶಿಕ್ಷಣ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಾಚಾರ್ಯರು ಹಾಗೂ ನುರಿತ ಹಿರಿಯ ಶಿಕ್ಷಕರು ಆಸಕ್ತಿ ವಹಿಸಿದಲ್ಲಿ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಲು ಸಮಯಾವಕಾಶ ನೀಡುವಂತೆ ಕೋರಲಾಗುವುದು ಎಂದರು.
ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಮಾತನಾಡಿ, ಯುವನಿಧಿ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ 20 ತಂಡಗಳನ್ನು ರಚಿಸಿ, ಹೊಣೆಗಾರಿಕೆ ವಹಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವವರಿಗಾಗಿ ಅಗತ್ಯ ಬಸ್ ಸೌಲಭ್ಯ, ಪಾರ್ಕಿಂಗ್ ವ್ಯವಸ್ಥೆ, ವೇದಿಕೆ ಸಿದ್ಧತೆ, ಆಸನ ವ್ಯವಸ್ಥೆ, ಊಟೋಪಹಾರ, ಕುಡಿಯುವ ನೀರು ಪೂರೈಕೆ ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
- - -ಕೋಟ್ ವಿವಿಧ ದಿಕ್ಕುಗಳಿಂದ ನಗರ ಪ್ರವೇಶಿಸುವ ವಾಹನಗಳ ನಿಲುಗಡೆಗಾಗಿ ಮೂರ್ನಾಲ್ಕು ಕಡೆಗಳಲ್ಲಿ ವ್ಯವಸ್ಥೆ, ಶೌಚಾಲಯ, ಉಟೋಪಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರು ಸಹಕರಿಸಬೇಕು
- ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ- - -
-6ಎಸ್‌ಎಂಜಿಕೆಪಿ05:ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.