ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅರ್ಹರು ಹೆಸರು ನೋಂದಾಯಿಸಿಕೊಳ್ಳಿ: ಡಿಸಿ

KannadaprabhaNewsNetwork |  
Published : Nov 23, 2026, 02:30 AM IST
ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾತನಾಡಿದರು.  | Kannada Prabha

ಸಾರಾಂಶ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2027ರ ವಿವಿಧ ಚಟುವಟಿಕೆಗಳನ್ನು ನಿಗದಿತ ಕಾಲಮಿತಿಯೊಳಗೆ ಕೈಗೊಳ್ಳಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಕನ್ನಡಪ್ರಭ ವಾರ್ತೆ ಗದಗ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2027ರ ವಿವಿಧ ಚಟುವಟಿಕೆಗಳನ್ನು ನಿಗದಿತ ಕಾಲಮಿತಿಯೊಳಗೆ ಕೈಗೊಳ್ಳಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಅರ್ಹರು ಹೆಸರು ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2027 ರ ಚಟುವಟಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2027ರ ಜನವರಿ 1 ಅರ್ಹತಾ ದಿನಾಂಕವಾಗಿದ್ದು, ನ. 23, 2026ರಂದು ಮತಗಟ್ಟೆಗಳ ಪುನರ್‌ವಿಂಗಡಣೆ ಕಾರ್ಯ ಕೈಗೊಳ್ಳಲಾಗುತ್ತದೆ. ಡಿ. 1, 2026ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದ್ದು, ಅದೇ ದಿನದಿಂದ ಡಿ. 31ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು 2027ರ ಜ. 14ರೊಳಗೆ ವಿಲೇವಾರಿ ಮಾಡಲಾಗುವುದು. ನಂತರ ಜ. 20, 2027ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳುವುದು, ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಹೆಸರು ಮತ್ತು ವಿಳಾಸದಲ್ಲಿನ ಬದಲಾವಣೆಗಳನ್ನು ಮಾಡಿಕೊಳ್ಳಲು ಭಾರತ ಚುನಾವಣಾ ಆಯೋಗವು ಅರ್ಜಿಗಳನ್ನು ನಿಗದಿಪಡಿಸಿದೆ.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬೇಕು. ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು ನಮೂನೆ-7ರಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ, ಮತದಾರರ ಹೆಸರು ಅಥವಾ ವಿಳಾಸದಲ್ಲಿನ ತಿದ್ದುಪಡಿ ಮಾಡಿಕೊಳ್ಳಲು ಹಾಗೂ ಒಂದು ವಾರ್ಡ್‌ನಿಂದ ಮತ್ತೊಂದು ವಾರ್ಡ್‌ಗೆ ಮತದಾನದ ಹಕ್ಕನ್ನು ವರ್ಗಾಯಿಸಿಕೊಳ್ಳಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬೇಕು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿದಾರರು ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು. ಅಲ್ಲದೆ, ಸಂಬಂಧಪಟ್ಟ ಮತಗಟ್ಟೆ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು. ಅರ್ಹ ಮತದಾರರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಈಗಾಗಲೇ ನೋಂದಾಯಿತವಾಗಿರುವ ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳಲ್ಲಿ ಬದಲಾವಣೆ ಅಥವಾ ತಿದ್ದುಪಡಿ ಅಗತ್ಯವಿದ್ದಲ್ಲಿ ಸರಿಪಡಿಸಿಕೊಳ್ಳಬೇಕು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು, ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹರು ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು. ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳಲ್ಲಿ ತಪ್ಪುಗಳಿದ್ದಲ್ಲಿ ನಿಗದಿತ ನಮೂನೆಗಳಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸಲು ಸಹಕರಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂತ್ರಜ್ಞಾನದ ಸದುಪಯೋಗ ಅತ್ಯಗತ್ಯ: ಕೋಜಿ ತ್ಸುಬೋಟಾ
ಸಹಕಾರ ಸಂಸ್ಥೆ ಸ್ವಾಯತ್ತ ಬೆಳವಣಿಗೆ: ಪೊನ್ನಣ್ಣ ಆಶಯ