ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ಸೂರು

KannadaprabhaNewsNetwork | Published : Jan 12, 2024 1:45 AM

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯಲ್ಲಿ 310 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದು, ಸಮಾಜ ಮತ್ತು ತಮ್ಮ ಕುಟುಂಬ ತಮ್ಮನ್ನು ಕೀಳರಿಮೆಯಿಂದ ಕಾಣುತ್ತಾರೆ ಎಂಬ ಕಾರಣದಿಂದ ಜನರಿಗೆ ಗುರುತಿಸಿಕೊಳ್ಳಲು ಸಾಧ್ಯವಾಗದೇ, ಸಮುದಾಯದಲ್ಲಿ ಮಾತ್ರ ಗುರುತಿಸಿಕೊಂಡಿದ್ದಾರೆ.

ಕಾರವಾರ:

ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾತರ ನೋವುಗಳಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅರ್ಹ ಎಲ್ಲರಿಗೂ ಮನೆ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ವಿವಿಧ ಯೋಜನೆಗಳ ಪ್ರಗತಿ ಕುರಿತು ತ್ರೈ ಮಾಸಿಕ ಸಭೆಯಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಬಳಿ ಪರಿಹರಿಸುವಂತೆ ಲಿಂಗತ್ವ ಅಲ್ಪಸಂಖ್ಯಾತರು ಮನವಿ ಮಾಡಿದರು.ಉತ್ತರ ಕನ್ನಡ ಜಿಲ್ಲೆಯಲ್ಲಿ 310 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದು, ಸಮಾಜ ಮತ್ತು ತಮ್ಮ ಕುಟುಂಬ ತಮ್ಮನ್ನು ಕೀಳರಿಮೆಯಿಂದ ಕಾಣುತ್ತಾರೆ ಎಂಬ ಕಾರಣದಿಂದ ಜನರಿಗೆ ಗುರುತಿಸಿಕೊಳ್ಳಲು ಸಾಧ್ಯವಾಗದೇ, ಸಮುದಾಯದಲ್ಲಿ ಮಾತ್ರ ಗುರುತಿಸಿಕೊಂಡಿದ್ದಾರೆ. ತಮ್ಮ ಕುಟುಂಬಗಳಿಂದ ದೂರವಿದ್ದು ಬಾಡಿಗೆ ಮನೆಯಲ್ಲಿ ವಾಸವಿದ್ದು, ಹೆಚ್ಚಿನ ಬಾಡಿಗೆ ಪಡೆಯಲಾಗುತ್ತಿದೆ. ಸಣ್ಣ ಪುಟ್ಟ ಕಾರಣಗಳಿಗೆ ಮನೆ ಖಾಲಿ ಮಾಡಿಸುತ್ತಿದ್ದಾರೆ. ಹೆಚ್ಚಿನ ಮಂದಿ ಭಿಕ್ಷಾಟನೆಯಲ್ಲಿ ದುಡಿಮೆ ಮಾಡುತ್ತಿದ್ದು, ಜಿಲ್ಲಾಡಳಿತದಿಂದ ಮನೆ ಮಂಜೂರಾತಿ ಮಾಡಿಕೊಡುವಂತೆ ಹಾಗೂ ಸ್ವ ಉದ್ಯೋಗಕ್ಕೆ ವ್ಯವಸ್ಥೆ ಮಾಡುವಂತೆ ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಗಳು ಕೋರಿದರು.ಮನೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಭಿಕ್ಷಾಟನೆ ಬಿಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯಲು ಅಗತ್ಯವಿರುವ ನೆರವು ಒದಗಿಸಲಾಗುವುದು ಎಂದ ಜಿಲ್ಲಾಧಿಕಾರಿ ಗಂಗೂಬಾಯಿ, ಜಿಲ್ಲಾಡಳಿತದ ಮೂಲಕ ವಿವಿಧ ಇಲಾಖೆಗಳಲ್ಲಿರುವ ಸ್ವಯಂ ಉದ್ಯೋಗ ಯೋಜನೆ, ತರಬೇತಿ ಮತ್ತು ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು ನೀಡುವ ಸೌಲಭ್ಯ ಮತ್ತು ತಾವು ಉತ್ಪಾದಿಸುವ ವಸ್ತುಗಳಿಗೆ ಮಾರುಕಟ್ಟೆ ಸೌಲಭ್ಯ ಸಹ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು.ಲಿಂಗತ್ವ ಅಲ್ಪ ಸಂಖ್ಯಾತರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ತಮ್ಮ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆ ಮಾಡಿಸಿಕೊಳ್ಳುವಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳುವಂತೆ ತಿಳಿಸಿದರು. ಇದೇ ವೇಳೆ ಮೂವರು ಲಿಂಗತ್ವ ಅಲ್ಪಸಂಖ್ಯಾತರಿಗೆ ಟಿಜಿ ಕಾರ್ಡ್ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಚಾರದ ಸಾಮಗ್ರಿ ಬಿಡುಗಡೆಗೊಳಿಸಲಾಯಿತು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ. ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರು ಇದ್ದರು.

Share this article