ಭಟ್ಕಳದಲ್ಲಿ ಎಡಿಜಿಪಿ–ಐಜಿಪಿ ನೇತೃತ್ವದಲ್ಲಿ ತುರ್ತು ಸಭೆ

KannadaprabhaNewsNetwork |  
Published : Jun 22, 2026, 02:30 AM IST
ಭಟ್ಕಳ ನಗರ ಠಾಣೆಗೆ ಎಡಿಜಿಪಿ ಆರ್. ಹಿತೇಂದ್ರ ಆಗಮಿಸಿದ್ದರು. | Kannada Prabha

ಸಾರಾಂಶ

ಪಟ್ಟಣದಲ್ಲಿ ಕಳೆದ ಕೆಲ ದಿನಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಲವು ಘಟನೆಗಳು ನಡೆದಿರುವ ಹಿನ್ನೆಲೆ ರಾಜ್ಯ ಪೊಲೀಸ್ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಹಾಗೂ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭಟ್ಕಳ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ । ಇತ್ತೀಚಿನ ಘಟನೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದ ಅಧಿಕಾರಿಗಳು

ಕನ್ನಡಪ್ರಭ ವಾರ್ತೆ ಭಟ್ಕಳ

ಪಟ್ಟಣದಲ್ಲಿ ಕಳೆದ ಕೆಲ ದಿನಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಲವು ಘಟನೆಗಳು ನಡೆದಿರುವ ಹಿನ್ನೆಲೆ ರಾಜ್ಯ ಪೊಲೀಸ್ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಹಾಗೂ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭಟ್ಕಳ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ವಿವಿಧ ಠಾಣೆಗಳ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಇತ್ತೀಚೆಗೆ ನಡೆದ ಘಟನೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.

ಮೇ 24ರಂದು ಪೊಲೀಸರ ಸಮ್ಮುಖದಲ್ಲಿ ನಡೆದ ಪುನರ್‌ನಿರ್ಮಿತ ಮುರಿನಕಟ್ಟೆ ಧ್ವಂಸ ಪ್ರಕರಣ, ಬಳಿಕ ಕೆಲ ಸಂಘಟನೆಗಳ ಮುಖಂಡರಿಂದ ನೀಡಲಾದ ಕೋಮು ಪ್ರಚೋದನಾ ಹೇಳಿಕೆಗಳು, ಎರಡು ದಿನಗಳ ಹಿಂದೆ ವಿಭಿನ್ನ ಕೋಮಿನ ಯುವಕ-ಯುವತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಡೆದ ನೈತಿಕ ಪೊಲೀಸ್‌ಗಿರಿ, ಯುವಕನ ಮೇಲಿನ ಹಲ್ಲೆ, ಯುವತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪ ಹಾಗೂ ಪ್ರತಿಭಟನೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಬೆದರಿಕೆ ಒಡ್ಡಿದ ಪ್ರಕರಣಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಭಟ್ಕಳದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪದೇ ಪದೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವ ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಕಾನೂನು ಕ್ರಮ ಜರುಗಿಸಬೇಕು. ಯಾವುದೇ ಒತ್ತಡಕ್ಕೂ ಮಣಿಯದೆ ಆರೋಪಿಗಳನ್ನು ಕಾನೂನಿನ ಮುಂದೆ ಹಾಜರುಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಕೋಮು ಪ್ರಚೋದಕ ಹೇಳಿಕೆ ನೀಡುವ ಕಿಡಿಗೇಡಿಗಳು ಹಾಗೂ ಮುಖಂಡರ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು ಮತ್ತು ಪ್ರಚೋದನಾತ್ಮಕ ಸಂದೇಶಗಳ ಬಗ್ಗೆ ವಿಶೇಷ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಎಂ.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಭಟ್ಕಳ ಡಿವೈಎಸ್ಪಿ ಗಿರೀಶ್ ಬಿ. ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಧನೆಗೆ ಯಾವುದೇ ಮಿತಿ ಇರುವುದಿಲ್ಲ: ತಹಸೀಲ್ದಾರ
ಬ್ಯಾಂಕ್ ಖಾತೆಯ ಹಣಕ್ಕಿಂತ ಆರೋಗ್ಯವೇ ನಿಜವಾದ ಆಸ್ತಿ: ಎಡಿಸಿ ಬಾಲಕೃಷ್ಣ